ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.23 : ತಮಿಳುನಾಡಿಗೆ ಕಾವೇರಿ ನೀರು ಬಿಡುವ ಹಾಗೂ ಕಾವೇರಿ ನದಿ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಣಯದ ವಿರುದ್ದ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‍ಕುಮಾರ್ ಶೆಟ್ಟಿ ಬಣದ ಕಾರ್ಯಕರ್ತರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕರ್ನಾಟಕದಲ್ಲಿ ಮುಂಗಾರು ಮಳೆ ವಿಫಲವಾಗಿದ್ದು, ಜಲಾಶಯಗಳಲ್ಲಿ ನೀರು ಇಲ್ಲದಂತಾಗಿದೆ. ಕಾವೇರಿ ಪ್ರಾಂತ್ಯದ ಸುತ್ತಮುತ್ತಲಿನ ರೈತರು ನೀರಿಲ್ಲದೆ ಪರಿತಪಿಸುತ್ತಿದ್ದಾರೆ. ಕಬಿನಿ, ಹಾರಂಗಿ, ಹೇಮಾವತಿ ಕೆ.ಆರ್.ಎಸ್.ನಲ್ಲಿ ಇಪ್ಪತ್ತು ಟಿ.ಎಂ.ಸಿ. ನೀರಿದ್ದು, ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಹೇಗೆ ಸಾಧ್ಯ?
ಕೇಂದ್ರ ಸರ್ಕಾರ ಎರಡು ರಾಜ್ಯಗಳ ಮುಖ್ಯಮಂತ್ರಿಗಳ ಹಾಗೂ ನೀರಾವರಿ ಸಚಿವರು, ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಿ ಮಾತುಕತೆಯ ಮೂಲಕ ನೀರಿನ ಸಮಸ್ಯೆನ್ನು ಬಗೆಹರಿಸಿಕೊಂಡು ರಾಜ್ಯದ ರೈತರ ಹಿತ ಕಾಪಾಡಬೇಕು. ಈಗ ಐದು ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸಿದರೆ ಕುಡಿಯುವ ನೀರಿಗೂ ಅಭಾವ ಎದುರಾಗಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಒಂದು ವೇಳೆ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ನಿಲ್ಲಿಸದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಉಗ್ರ ಹೋರಾಠ ನಡೆಸಲಾಗುವುದೆಂದು ಎಚ್ಚರಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಸ್.ಕೆ.ಮಹಂತೇಶ್, ಕಾರ್ಯದರ್ಶಿ ರವಿಕುಮಾರ್, ಉಪಾಧ್ಯಕ್ಷ ತಿಪ್ಪೇಸ್ವಾಮಿ, ಸುರೇಶ್ ಟೈಲರ್, ರವಿ, ರವಿಕುಮಾರ್, ಬಾಬು, ಸೈಯದ್‍ಅಲಿ, ಸುರೇಶ್, ಎಲ್.ಐ.ಸಿ. ಕೃಷ್ಣಮೂರ್ತಿ, ವೆಂಕಟೇಶ್, ಗಾಯತ್ರಿ ಶಿವರಾಜ್, ಶಿವರುದ್ರಮ್ಮ, ನಾಗಲಕ್ಷ್ಮಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.