ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಸುದ್ದಿಒನ್,ಚಿತ್ರದುರ್ಗ, (ನ.14): ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಕೊರ್ಲಕುಂಟೆ ತಿಪ್ಪೇಸ್ವಾಮಿಯನ್ನು ಮತದಾರರು ಗೆಲ್ಲಿಸಿದರೆ ಸಾಮಾಜಿಕ ನ್ಯಾಯ ನೀಡಿದಂತಾಗುತ್ತದೆ ಎಂದು ಕವಿ, ಸಂಘಟಕ, ಹೋರಾಟಗಾರ ವಡ್ಡಗೆರೆ ನಾಗರಾಜಯ್ಯ ಮತದಾರರಲ್ಲಿ ಮನವಿ ಮಾಡಿದರು.
ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕಟ್ಟಕಡೆಯ ತಳಸಮುದಾಯದಿಂದ ಬಂದಿರುವವರಿಗೆ ಕನ್ನಡ ಸಾಹಿತ್ಯ ಪರಿಷತ್‍ನಲ್ಲಿ ಸ್ಥಾನ ಸಿಕ್ಕಿರುವುದು ತುಂಬಾ ಕಡಿಮೆ. ಹಾಗಾಗಿ ಈ ಬಾರಿಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕೊರ್ಲಕುಂಟೆ ತಿಪ್ಪೇಸ್ವಾಮಿಗೆ ನಮ್ಮ ಬೆಂಬಲವಿದೆ. ದಲಿತ ಸಾಹಿತ್ಯ ಕನ್ನಡ ಸಾಹಿತ್ಯದಲ್ಲಿ ಪಲ್ಲವಿಸಿದೆ. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಇವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವುದು ಸೂಕ್ತ. ಕನ್ನಡ ಸಾಹಿತ್ಯ ಪರಿಷತ್ ರಾಜಕೀಯದಿಂದ ಹೊರತಾಗಿ ಜಾತ್ಯಾತೀತವಾಗಿರಬೇಕಾದರೆ ಕೊರ್ಲಕುಂಟೆ ತಿಪ್ಪೇಸ್ವಾಮಿಯಂತವರನ್ನು ಮತದಾರರು ಗೆಲ್ಲಿಸಬೇಕೆಂದು ವಿನಂತಿಸಿದರು.
ಕೇಂದ್ರಿಯ ವಿಶ್ವವಿದ್ಯಾಲಯ ಕಲಬುರ್ಗಿಯ ಡಾ.ಅಪ್ಪಿಗೆರೆ ಸೋಮಶೇಖರ್ ಮಾತನಾಡಿ ಕನ್ನಡ ಸಾಹಿತ್ಯ, ಭಾಷೆಗೆ ಇದುವರೆವಿಗೂ ಪ್ರಾಮಾಣಿಕವಾಗಿ ಕೆಲಸ ಮಾಡಿಕೊಂಡು ಬರುತ್ತಿರುವ ಕೊರ್ಲಕುಂಟೆ ತಿಪ್ಪೇಸ್ವಾಮಿಗೆ ಈ ಬಾರಿಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಅವಕಾಶ ಕೊಡಿ. ಕವಿ ಡಾ.ಸಿದ್ದಲಿಂಗಯ್ಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಲು ನೂರು ವರ್ಷಗಳು ಬೇಕಾಯಿತು. ಎಲ್ಲಾ ಸಮುದಾಯಕ್ಕೂ ಪ್ರಾತಿನಿಧ್ಯ ನೀಡಬೇಕೆಂಬ ಉದ್ದೇಶದಿಂದ ಮೈಸೂರು ಮಹಾರಾಜರು ಕನ್ನಡ ಸಾಹಿತ್ಯ ಪರಿಷತ್‍ನ್ನು ಹುಟ್ಟುಹಾಕಿದರು. ಪ್ರಜಾಸತ್ತಾತ್ಮಕ ಸಂಸ್ಥೆಯಾಗಿ ರೂಪಿಸಬೇಕಿದೆ ಎಂದು ಹೇಳಿದರು.
ಯಾದಲಗಟ್ಟೆ ಜಗನ್ನಾಥ್, ಯಡೆಕುಂಟೆ ಮಂಜುನಾಥ್ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.