ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ, (ಮಾ.06) : ಜಿಲ್ಲೆಯಲ್ಲಿ ಬೆಂಕಿಬಿದ್ದು ಹಾಳಾದ ದಾಳಿಂಬೆ ಹಾಗೂ ಇತರೆ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ರಕರಣ ಎಂದು ಪರಿಗಣಿಸಿ ಎನ್‍ಡಿಆರ್‍ಎಫ್ ಅಡಿ ಪರಿಹಾರ ನೀಡಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿ ಎಂದು ಎಂದು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ತೋಟಗಾರಿಕೆ ಉಪನಿರ್ದೇಶಕರಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೊಳಕಾಲ್ಮುರು ತಾಲ್ಲೂಕು ಹೊರತು ಪಡಿಸಿ, ಜಿಲ್ಲೆಯ ಐದು ತಾಲ್ಲೂಕುಗಳಲ್ಲಿಯೂ ಅಡಿಕೆ, ದಾಳಿಂಬೆ ಬೆಳೆಗಳು ಆಕಸ್ಮಿಕ ಬೆಂಕಿಬಿದ್ದು ಸುಟ್ಟು ಹೋಗಿವೆ. ಈ ಕುರಿತು ವಿಮೆ ಕಂಪನಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ತೊಟಗಾರಿಕೆ ಉಪನಿರ್ದೇಶಕರು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕೆಲವೊಂದು ಮಾರ್ಪಾಡು ಮಾಡಿ, ಇಂತಹವುಗಳನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಪರಿಹಾರ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.
ಮಲೆನಾಡಿನಲ್ಲಿ ಮಾತ್ರವಲ್ಲದೇ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯಲ್ಲಿಯೂ ಈಚೆಗೆ ಅಡಿಕೆ ಬೆಳೆಯನ್ನು ಬೆಳೆಯಲು ಹೆಚ್ಚಾಗಿ ರೈತರು ಶುರುಮಾಡಿದ್ದು, ಬಯಲುಸೀಮೆಯ ಅಡಿಕೆ ಬೆಳೆಗೂ ಪ್ರೊತ್ಸಾಹಧನ ನೀಡಬೇಕು ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ತೋಟಗಾರಿಕೆ ಉಪನಿರ್ದೇಶಕಿ ಸವಿತಾ, ಒಣಹವೆ ಇರುವಂತಹ ಪ್ರದೇಶಗಳಲ್ಲಿ ಅಡಿಕೆ ಬೆಳೆ ಸರಿಯಾಗಿ ಬರುವುದಿಲ್ಲ. ಆದಾಗ್ಯೂ ನೀರಾವರಿ ಇರುವ ಒಣಹವೆ ಪ್ರದೇಶದ ತಾಲ್ಲೂಕುಗಳಲ್ಲೂ ಅಡಿಕೆ ಬೆಳೆ ಹಾಕುತ್ತಿದ್ದಾರೆ. ಆದಾಗ್ಯೂ ಅಡಿಕೆ ಬೆಳೆಗೆ ಪ್ರೊತ್ಸಾಹ ನೀಡುವಂತೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ತಿಳಿಸಿದರು.