ಬೆಂಗಳೂರು: ಡಾಕ್ಟರ್ ಆಗಬೇಕೆಂದು ಕನಸು ಕಾಣುತ್ತಿರುವವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ವೈದ್ಯಕೀಯ ಸೀಟುಗಳ ಹಂಚಿಕೆಯನ್ನು ಹೆಚ್ಚು ಮಾಡಲಾಗಿದೆ. ಕರ್ನಾಟಕದ ನಾಲ್ಕು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ವೈದ್ಯಕೀಯ ಸಲಹಾ ಸಮಿತಿ ತಲಾ 50 ಸೀಟುಗಳನ್ನು ಹಂಚಲಾಗಿದೆ. ನಾಲ್ಕು ಕಾಲೇಜುಗಳಿಗೆ ಒಟ್ಟು 200 ಸೀಟುಗಳನ್ನು ಹೆಚ್ಚುವರಿಯಾಗಿ ಮಂಜೂರು ಮಾಡಲಾಗಿದೆ. ಅಕ್ಟೋಬರ್ 15 ರಿಂದ ಬೆಳಗ್ಗೆ 8 ಗಂಟೆಯವರೆಗೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.
ಶಿವಮೊಗ್ಗದ ಸುಬ್ಬಯ್ಯ, ಬೆಂಗಳೂರಿನ ನಾಗರೂರಿನ ಬಿಜಿಎಸ್, ತುಮಕೂರಿನ ಶ್ರೀದೇವಿ, ಮಂಗಳೂರಿನ ಎ.ಜೆ.ವೈದ್ಯಕೀಯ ಕಾಲೇಜುಗಳಿಗೆ ಹೆಚ್ಚುವರಿ ಸೀಟು ಹಂಚಿಕೆ ಮಾಡಲಾಗಿದೆ. ಈ ಕಾಲೇಜುಗಳಲ್ಲಿ ಪ್ರವೇಶಕ್ಕೆ ಆಪ್ಶನ್ ದಾಖಲಿಸಲು ಅವಕಾಶ ನೀಡಲಾಗಿದೆ. ಈ ಕಾಲೇಜುಗಳ ಶುಲ್ಕವನ್ನು ಗಮನಿಸಿ ಆಪ್ಶನ್ ದಾಖಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಈಗಾವಲೇ ಮೊದಲ ಮತ್ತು ಎರಡನೇ ಸುತ್ತಿನಲ್ಲಿ ವೈದ್ಯಕೀಯ ಸೀಟು ಹಂಚಿಕೆಯಾಗಿ ಕಾಲೇಜುಗಳಿಗೆ ವರದಿ ಮಾಡಿಕೊಂಡವರು ಈ ನಾಲ್ಕು ಕಾಲೇಜುಗಳ ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.
ಈಗಾಗಲೇ ಶುಲ್ಕ ಕಟ್ಟಿರುವ ಕಾರಣ ಅವರು ಮುಂಗಡ ಶುಲ್ಕ ಕಟ್ಟುವ ಅಗತ್ಯ ಇರುವುದಿಲ್ಲ. ಆದರೆ ಯಾರಿಗೆ ಸೀಟು ಹಂಚಿಕೆಯಾಗಿಲ್ಲವೊ ಅಂತಹವರು ಮುಂಗಡ ಶುಲ್ಕ ಕಟ್ಟಬೇಕು. ಈ ಸುತ್ತಿನಲ್ಲಿ ಸೀಟು ಹಂಚಿಕೆಯಾದರೆ ಪ್ರವೇಶ ಪಡೆಯುವುದು ಕಡ್ಡಾಯ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಐಎಎಸ್ ಮಾಹಿತಿ ನೀಡಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ನವದೆಹಲಿಗೆ ತೆರಳಿ ಭೇಟಿಯಾಗಿ ರಾಜ್ಯದ 15 ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಹೆಚ್ಚುವರಿ ವೈದ್ಯಕೀಯ ಸೀಟುಗಳನ್ನು ಮಂಜೂರು ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದ್ದರು.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






