ಚಿತ್ರದುರ್ಗ .ಮೇ.11: ಶ್ವಾಸಕೋಶದ ಸೋಂಕು ಹಾಗೂ ಅನಾರೋಗ್ಯದಿಂದ ಭಾನುವಾರ ನಿಧನರಾದ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಗೆ ಗಣ್ಯರು ಹಾಗೂ ಜನಸಾಗರವೇ ಹರಿದುಬಂದಿದೆ.
ಚಳ್ಳಕೆರೆ ನಗರದ ಹೆಚ್.ಪಿ.ಪಿ.ಸಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾಂಗಣದಲ್ಲಿ (ಡಿ. ಸುಧಾಕರ್ ಸ್ಟೇಡಿಯಂ) ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಕೃಷಿ ಸಚಿವ ಚೆಲುವರಾಯಸ್ವಾಮಿ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಮಾಜಿ ಕೇಂದ್ರ ಸಚಿವ ಜಿ.ಎಂ. ಸಿದ್ದೇಶ್ವರ ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.
ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ, ಸುಧಾಕರ್ ಅವರು ಸರಳ ರಾಜಕೀಯ ಮತ್ತು ವೈಯಕ್ತಿಕ ಜೀವನ ನಡೆಸಿದವರು. ಕಳೆದ 25 ವರ್ಷಗಳಿಂದ ಅವರ ಪರಿಚಯವಿತ್ತು. ಸಂಪುಟದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದೇವೆ. ಅವರ ನಗುಮೊಗದ ಮತ್ತು ಪ್ರಾಮಾಣಿಕ ವ್ಯಕ್ತಿತ್ವ ನಮ್ಮೆಲ್ಲರಿಗೂ ಮಾದರಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ, ಪಕ್ಷ ಸದಾ ಅವರ ಕುಟುಂಬದ ಬೆನ್ನಿಗಿದೆ ಎಂದು ಭಾವುಕರಾದರು.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿ, ಹುಟ್ಟು ಉಚಿತ, ಸಾವು ಖಚಿತ. ಸಣ್ಣ ಸಮುದಾಯದಿಂದ ಬಂದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗುವುದು ಸಾಮಾನ್ಯವಲ್ಲ. ಅವರು ಸದಾ ರೈತರ ಮತ್ತು ಬಡವರ ಪರವಾಗಿ ನಿಲ್ಲುತ್ತಿದ್ದರು. ಭದ್ರಾ ಮೇಲ್ದಂಡೆ ಯೋಜನೆಗೆ ಸಚಿವ ಡಿ. ಸುಧಾಕರ್ ಅವರ ಹೆಸರಿಡುವ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.
ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್ ಮಾತನಾಡಿ, ಸುಧಾಕರ್ ಅವರು ಕಳೆದ 45 ವರ್ಷಗಳಿಂದ ನನಗೆ ಆತ್ಮೀಯ ಸ್ನೇಹಿತರಾಗಿದ್ದರು. ಜೈನ ಸಮುದಾಯದವರಾಗಿದ್ದರೂ ಎಲ್ಲ ವರ್ಗದ ಜನರ ಪ್ರೀತಿ ಗಳಿಸಿ ಜನಾನುರಾಗಿಯಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ನಮ್ಮನ್ನು ಅಗಲಿರುವುದು ದುರದೃಷ್ಟಕರ. ಇಂದು ಅಂತಿಮ ದರ್ಶನಕ್ಕೆ ಹರಿದು ಬರುತ್ತಿರುವ ಜನಸಾಗರವೇ ಅವರು ಎಂತಹ ಸ್ನೇಹಜೀವಿ ಎಂಬುದಕ್ಕೆ ಸಾಕ್ಷಿ” ಎಂದು ಸ್ಮರಿಸಿದರು.
ಡಿ. ಸುಧಾಕರ್ ಅವರ ನಿಧನಕ್ಕೆ ಚಿತ್ರದುರ್ಗ ಜಿಲ್ಲೆಯಾದ್ಯಂತ ಶೋಕ ಮಡುಗಟ್ಟಿದ್ದು, ಅವರ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಅಂತಿಮ ವಿದಾಯ ಹೇಳಲು ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












