ಸುದ್ದಿಒನ್, ಚಿತ್ರದುರ್ಗ, ಮೇ. 10 : ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವಾರು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಚಳ್ಳಕೆರೆಯಲ್ಲಿ ನಾಳೆ ಸಚಿವ ಡಿ.ಸುಧಾಕರ್ ಅಂತ್ಯಕ್ರಿಯೆ ನಡೆಯಲಿದ್ದು, ನಗರದ ಸುಧಾಕರ್ ಸ್ಟೇಡಿಯಂನಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಸಚಿವ ಸಂಪುಟದ ಹಲವು ಸಚಿವರು ಅಂತ್ಯಕ್ರಿಯೆ ಪಾಲ್ಗೊಳ್ಳಲಿದ್ದಾರೆ. ಅಗಲಿದ ನಾಯಕನಿಗೆ ಗೌರವ ಸಲ್ಲಿಸಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಮತ್ತು ಸಾರ್ವಜನಿಕರು ಆಗಮಿಸುವ ನಿರೀಕ್ಷೆಯಿದ್ದು, ಸಿದ್ಧತೆಗಳು ಪೂರ್ಣಗೊಂಡಿವೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಹಾಗೂ ಸುಗಮವಾಗಿ ದರ್ಶನ ಪಡೆಯಲು ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತವು ಬಿಗಿ ಬಂದೋಬಸ್ತ್ ಕೈಗೊಳ್ಳಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
ಇಂದು ಸಚಿವರ ಅಂತಿಮ ದರ್ಶನ ಪಡೆದ ಗಣ್ಯರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್,
ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ವಿಜ್ಞಾನ ತಂತ್ರಜ್ಞಾನ ಹಾಗೂ ಸಣ್ಣ ನೀರಾವರಿ ಸಚಿವ ಬೋಸರಾಜು, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಅಧ್ಯಕ್ಷ ಪಿ.ರಘು, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಜಿ.ಪಂ.ಸಿಇಓ ಡಾ.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಸಚಿವರ ಅಪಾರ ಅಭಿಮಾನಿಗಳು ಅಂತಿಮ ದರ್ಶನ ಪಡೆದರು.

















