Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು ತಾಲ್ಲೂಕಿನ ವಿವಿಧ ಗ್ರಾಮಗಳ ರೈತರ ಜಮೀನುಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ, ಪರಿಶೀಲನೆ

---Advertisement---

ಚಿ. ಆ.05:  ಹಿರಿಯೂರು ತಾಲ್ಲೂಕಿನಲ್ಲಿ ಈ ಬಾರಿ ತೀವ್ರ ಮಳೆ ಕೊರತೆಯಾಗಿದ್ದು, ಕೇವಲ ಶೇ.11ರಷ್ಟು ಮಾತ್ರ ಬಿತ್ತನೆಯಾಗಿದೆ. ಮಳೆ ಅಭಾವ ಹಾಗೂ ಬರ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ರೈತರ ಪರವಾಗಿ ನಿಲ್ಲಲಿದೆ ಎಂದು ಸಚಿವ ಟಿ.ರಘುಮೂರ್ತಿ ಹೇಳಿದರು.

ಹಿರಿಯೂರು ತಾಲ್ಲೂಕಿನ ಆನೆಸಿದ್ರಿ ಗ್ರಾಮದ ವ್ಯಾಪ್ತಿಯಲ್ಲಿ ರೈತ ಜಯರಾಮಯ್ಯ ಅವರ ಜಮೀನಿಗೆ ಬುಧವಾರ ಭೇಟಿ ನೀಡಿ, ಬೆಳೆ ಹಾಗೂ ಕೃಷಿ ಭೂಮಿಯನ್ನು ಪರಿಶೀಲಿಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದ ಹಲವೆಡೆ ಭೀಕರ ಬರಗಾಲ ಎದುರಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ನಮ್ಮ ಜಿಲ್ಲೆಯಲ್ಲೂ ಮಳೆ ಕೊರತೆಯಿಂದಾಗಿ ತೀವ್ರ ಬರ ಆವರಿಸಿದೆ. ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಬೆಂಗಳೂರು ವಿಭಾಗ ಮಟ್ಟದ ಸಭೆಯಲ್ಲಿ ಬರ ಪರಿಸ್ಥಿತಿ ಎದುರಿಸಲು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ನಿರ್ದೇಶನದಂತೆ ಬರ ಪರಿಸ್ಥಿತಿ ಕುರಿತು ಪರಿಶೀಲಿಸಲು ಪ್ರವಾಸ ಕೈಗೊಳ್ಳುತ್ತಿದ್ದೇನೆ. ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಸಚಿವರಿಗೆ ಬರ ನಿರ್ವಹಣೆ ಜವಾಬ್ದಾರಿಯನ್ನು ಹಂಚಿದ್ದಾರೆ. ಅಧಿಕಾರಿಗಳು ಸಿದ್ಧಪಡಿಸಿದ ವರದಿಗಳನ್ನು ಪರಿಶೀಲಿಸುವುದಲ್ಲದೆ, ಸ್ವತಃ ಸ್ಥಳಕ್ಕೆ ಭೇಟಿ ನೀಡಿ ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ನೈಜ ಪರಿಸ್ಥಿತಿಯ ವರದಿ ತಯಾರಿಸಲಾಗುವುದು. ಈ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ, ಬರಪೀಡಿತ ಪ್ರದೇಶವೆಂದು ಘೋಷಿಸಲು ಕ್ರಮ ಕೈಗೊಳ್ಳಲಾಗುವುದು. ಜವನಗೊಂಡನಹಳ್ಳಿ ಹೋಬಳಿಯಲ್ಲಿ ಕುಡಿಯುವ ನೀರಿನ ಪೂರೈಕೆ ಹಾಗೂ ಬಿತ್ತನೆಯಾಗದ ಪ್ರದೇಶಗಳನ್ನು ವೀಕ್ಷಿಸಲಾಗಿದೆ ಎಂದರು.

‘ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ’ ಅಡಿಯಲ್ಲಿ ಪರಿಹಾರ ದೊರೆಯಲಿದೆ. ಬಿತ್ತನೆ ಮಾಡದಿದ್ದರೂ ಶೇ 25ರಷ್ಟು ಬಿತ್ತನೆ ವೈಫಲ್ಯ ನಷ್ಟ ಪರಿಹಾರ ಸಿಗಲಿದೆ. ಬೆಳೆ ಹಾನಿಯಾದ ರೈತರಿಗೂ ವಿಮೆ ಮೂಲಕ ನೆರವು ಸಿಗಲಿದೆ’ ಎಂದರು.

‘ಫಸಲ್ ಭೀಮಾ ಯೋಜನೆಯ ನೋಂದಣಿ ಗಡುವನ್ನು ಮುಂದುವರಿಸಲು ಮುಖ್ಯಮಂತ್ರಿಗಳು ಕೇಂದ್ರ ಕೃಷಿ ಸಚಿವರಿಗೆ ಈಗಾಗಲೇ ಪತ್ರ ಬರೆದಿದ್ದಾರೆ. ಅಲ್ಲದೆ, ರಾಗಿ ಬಿತ್ತನೆಗೆ ಇನ್ನು ಕಾಲಾವಕಾಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ’ ಎಂದು ಸಚಿವ ರಘುಮೂರ್ತಿ ಸ್ಪಷ್ಟಪಡಿಸಿದರು.

2.30 ಲಕ್ಷ ರೈತರಿಂದ ವಿಮೆ ನೋಂದಣಿ:

‘ಜಿಲ್ಲೆಯಲ್ಲಿ ಒಟ್ಟು 3 ಲಕ್ಷಕ್ಕೂ ಹೆಚ್ಚು ರೈತರಿದ್ದು ಬೆಳೆ ವಿಮೆ ನೊಂದಣಿಗೆ ಅಭಿಯಾನ ನಡೆಸಿ ಜಾಗೃತಿ ಮೂಡಿಸಲಾಗಿದೆ. ಇದರ ಪರಿಣಾಮವಾಗಿ ಚಿತ್ರದುರ್ಗ ಜಿಲ್ಲೆಯೊಂದರಲ್ಲೇ ಸುಮಾರು 2.30 ಲಕ್ಷ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಿಂದ ಬರ ಎದುರಿಸಲು ರೈತರಿಗೆ ನೆರವಾಗಲಿದೆ’ ಎಂದು ವಿವರಿಸಿದರು.ಇದೇ ವೇಳೆ, ಕುಡಿಯುವ ನೀರಿನ ಅಭಾವವಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ರಘುಮೂರ್ತಿ ತಿಳಿಸಿದರು.

ಹಿರಿಯೂರು ತಾಲ್ಲೂಕಿನಲ್ಲಿ ಶೇ. 11ರಷ್ಟು ಮಾತ್ರ ಬಿತ್ತನೆಯಾಗಿದ್ದು, ಜಿಲ್ಲೆಯಲ್ಲಿ ಶೇ.80ಕ್ಕೂ ಹೆಚ್ಚು ಪ್ರದೇಶದಲ್ಲಿ ಬಿತ್ತನೆಯೇ ಆಗಿಲ್ಲ. ಬಿತ್ತನೆ ಮಾಡದಿರುವ ರೈತರಿಗೆ ಶೇ 25ರಷ್ಟು ಬಿತ್ತನೆ ವೈಫಲ್ಯ ಹಾಗೂ ಬಿತ್ತನೆ ಮಾಡಿ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಫಸಲ್ ಭೀಮಾ ಯೋಜನೆಯಡಿ ಪರಿಹಾರ ಕೊಡಿಸಲು ಸರ್ಕಾರ ಬದ್ಧವಾಗಿದೆ. ಭೀಮಾ ಯೋಜನೆಗೆ ಅರ್ಜಿ ಸಲ್ಲಿಸುವ ಗಡುವನ್ನು ವಿಸ್ತರಿಸುವಂತೆ ಕೇಂದ್ರ ಕೃಷಿ ಸಚಿವಾಲಯಕ್ಕೆ ಪತ್ರ ಬರೆಯಲಾಗಿದೆ ಎಂದು ಸಚಿವರು ತಿಳಿಸಿದರು.

ಆಗಸ್ಟ್ ಅಂತ್ಯಕ್ಕೆ ಭದ್ರಾ ಮೇಲ್ದಂಡೆ ಯೋಜನೆಯಡಿ ಗೋನೂರು ಕೆರೆಗೆ ನೀರು ಹರಿಸಲಾಗುವುದು. ಮುಂದಿನ ವರ್ಷದ ಅಂತ್ಯ ಅಕ್ವಾ ಡೆಕ್ಟ್ ಕಾಮಗಾರಿ ಪೂರ್ಣಗೊಳಿಸಿ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಕೆರೆಗಳನ್ನು ತುಂಬಿಸುವ ಪ್ರಯತ್ನ ಮಾಡಲಾಗುವುದು. ಜೆ.ಜಿ.ಹಳ್ಳಿ ಕುಡಿಯುವ ನೀರಿನ ಯೋಜನೆಗೆ ಈಗಾಗಲೇ ರೂ.244 ಕೋಟಿ ಬಿಡುಗಡೆ ಮಾಡಲಾಗಿದೆ. ಸಣ್ಣ ನೀರಾವರಿ ಇಲಾಖರ ಮೂಲಕ 16 ಕೆರೆಗಳಿಗೆ ನೀರು ತುಂಬಿಸಲು ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ಸಚಿವ ಟಿ.ರಘುಮೂರ್ತಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್, ತೋಟಗಾರಿಕೆ ಜಂಟಿ ನಿರ್ದೇಶಕಿ ಸವಿತಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now