ನೂತನ ಜಿಲ್ಲಾಡಳಿತ ಭವನ ನಿರ್ಮಾಣಕ್ಕೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಭೂಮಿಪೂಜೆ

2 Min Read

ಚಿತ್ರದುರ್ಗ, (ನವೆಂಬರ್.08) : ಚಿತ್ರದುರ್ಗದ ಕುಂಚಿಗನಾಳ್ ಕಣಿವೆಯಲ್ಲಿ ನೂತನ ಜಿಲ್ಲಾಡಳಿತ ಭವನ ನಿರ್ಮಾಣ ಕಾಮಗಾರಿಗೆ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಸೋಮವಾರ ಭೂಮಿಪೂಜೆ ನೆರವೇರಿಸಿದರು.

ಚಿತ್ರದುರ್ಗ ನಗರದ ರಾಷ್ಟ್ರೀಯ ಹೆದ್ದಾರಿ-4ರ ಕುಂಚಿಗನಾಳ್ ಕಣಿವೆಯ ಮೇಲೆ ಎತ್ತರದ ಸ್ಥಳದಲ್ಲಿ ಆಕರ್ಷಣಿಯವಾಗಿ ನೂತನ ಜಿಲ್ಲಾಡಳಿತ ಭವನ ನಿರ್ಮಾಣವಾಗಲಿದ್ದು, ಜಿಲ್ಲಾಡಳಿತ ಭವನದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮುಂಬರುವ ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದ ಶಾಸಕರು, ಈ ಕಟ್ಟಡ ನಿರ್ಮಾಣದಿಂದ ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಜಿಲ್ಲಾಡಳಿತ ಭವನ ಕಾಮಗಾರಿಯು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಉದ್ದೇಶದಿಂದ ಸಾಂಕೇತಿಕವಾಗಿ ಭೂಮಿಪೂಜೆ ನೆರವೇರಿಸಲಾಗಿದ್ದು, ಬುಧವಾರದಿಂದ ಕೆಲಸ ಪ್ರಾರಂಭವಾಗಲಿದೆ. ನೂತನ ಜಿಲ್ಲಾಡಳಿತ ಭವನಕ್ಕೆ ರೂ.44 ಕೋಟಿ ವೆಚ್ಚದ ಕಾರ್ಯಯೋಜನೆ ರೂಪಿಸಲಾಗಿದ್ದು, ಈಗಾಗಲೇ ರೂ.25 ಕೋಟಿ ಅನುದಾನ ಬಿಡುಗಡೆಯಾಗಿ ಒಂದುವರೆ ವರ್ಷವಾಗಿದೆ. ಕಟ್ಟಡ ನಿರ್ಮಾಣಕ್ಕಾಗಿ ಪೂರ್ವಸಿದ್ಧತೆ ಕೈಗೊಳ್ಳಲಿಕ್ಕಾಗಿ ಕಾಮಗಾರಿಯು ತಡವಾಗಿ ಪ್ರಾರಂಭವಾಗುತ್ತಿದೆ ಎಂದು ಹೇಳಿದರು.

ಚಿತ್ರದುರ್ಗ ಜಿಲ್ಲಾಡಳಿತ ಭವನ ನಿರ್ಮಾಣದ ಸ್ಥಳವನ್ನು ಕಂದಾಯ ಸಚಿವರಾದ ಆರ್.ಅಶೋಕ್ ಅವರು ವೀಕ್ಷಣೆ ಮಾಡಿ, ಜಿಲ್ಲಾಡಳಿತ ಭವನ ಕಟ್ಟಡಕ್ಕೆ ಆಯ್ಕೆ ಮಾಡಿಕೊಂಡ ಸ್ಥಳವಾಗಿದ್ದು, ನಿರ್ಮಾಣ ಕಾರ್ಯವನ್ನು ಮಾಡುವಂತೆ ಸೂಚಿಸಿದ್ದರು. ಶೀಘ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೂತನ ಜಿಲ್ಲಾಡಳಿತ ಭವನ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಜಿಲ್ಲಾಡಳಿತ ಭವನದ ಕಚೇರಿಗೆ ಬಂದು ಹೋಗಲು ಅನುಕೂಲವಾಗುವಂತೆ ಉತ್ತಮವಾದ ರಸ್ತೆಯನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು. ರಸ್ತೆ ನಿರ್ಮಾಣಕ್ಕಾಗಿ ರೂ.7 ಕೋಟಿ ಅನುದಾನದ ಅಗತ್ಯವಿದ್ದು, ಈಗಾಗಲೇ ಕಂದಾಯ ಸಚಿವರಲ್ಲಿ ಚರ್ಚಿಸಿದ್ದು, ಪ್ರಸ್ತಾವನೆ ಸಲ್ಲಿಸಿ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದರು.

ಜಿಲ್ಲಾಡಳಿತ ಭವನದ ಅಕ್ಕಪಕ್ಕದಲ್ಲಿ ಈಗಾಗಲೇ 12 ಕೋಟಿ ವೆಚ್ಚದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯ, ಜಿಟಿಟಿಸಿ ಕೇಂದ್ರ ಸೇರಿದಂತೆ ಹಲವು ಸರ್ಕಾರಿ ಕಟ್ಟಡಗಳು ಇಲ್ಲಿದ್ದು, ಮುಂದಿನ ದಿನಗಳಲ್ಲಿ ಇದೊಂದು ಉತ್ತಮ ಆಕರ್ಷಣಿಯ ಜಿಲ್ಲಾ ಕಚೇರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ,ನಗರಸಭೆ ಅಧ್ಯಕ್ಷೆ ಬಿ.ತಿಪ್ಪಮ್ಮ, ನಗರಸಭೆ ಸದಸ್ಯರಾದ ವೆಂಕಟೇಶ್, ಮಲ್ಲಿಕಾರ್ಜುನ್, ಹರೀಶ್, ಸುರೇಶ್, ತಾರಕೇಶ್ವರಿ, ಭಾಗ್ಯಮ್ಮ, ಅನುರಾಧ, ತಹಶೀಲ್ದಾರ್ ಸತ್ಯನಾರಾಯಣ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಸತೀಶ್‍ಬಾಬು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *