ಚಿತ್ರದುರ್ಗ : ಆಗಸ್ಟ್02: ಮಕ್ಕಳಲ್ಲಿರುವ ಅಪೌಷ್ಠಿಕತೆ ಹೋಗಲಾಡಿಸುವ ನಿಟ್ಟಿನಲ್ಲಿ ಹಾಗೂ ಉತ್ತಮ ಆರೋಗ್ಯ ಕಾಪಾಡುವ ದೃಷ್ಠಿಯಿಂದ ಪೂರಕ ಪೌಷ್ಠಿಕ ಆಹಾರ ಬಹಳ ಮುಖ್ಯವಾಗಿದೆ ಎಂದು ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.
ನಗರದ ಐಯುಡಿಪಿ ಲೇಔಟ್‍ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ 1 ರಿಂದ 7ನೇ ತರಗತಿ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾಚಿಕ್ಕಿ ಅಂತಹ ಪೂರಕ ಪೌಷ್ಠಿಕ ಆಹಾರ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶಾಲಾ ಮಕ್ಕಳು ಪೌಷ್ಠಿಕಾಂಶದ ಕೊರತೆಯಿಂದ ಅನಾರೋಗ್ಯಕ್ಕೆ ತುತ್ತಾಗಬಾರದು. ಮಕ್ಕಳು ಮಾನಸಿಕವಾಗಿ, ದೈಹಿಕವಾಗಿ ಸದೃಢವಾಗಿರಬೇಕು ಎಂಬ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರವು ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರಗಳಾದ ಮೊಟ್ಟೆ, ಬಾಳೆಹಣ್ಣು ಹಾಗೂ ಶೇಂಗಾಚಿಕ್ಕಿ ವಿತರಣೆ ಮಾಡಲಾಗುತ್ತಿದೆ. ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು, ಶೇಂಗಾಚಿಕ್ಕಿಯನ್ನು ವಿತರಿಸಲಾಗುತ್ತಿದ್ದು, ಇದರಿಂದ ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಉತ್ತಮ ದರ್ಜೆಯ ಗುಣಮಟ್ಟದ ಮೊಟ್ಟೆ, ಬಾಳೆಹಣ್ಣು ವಿತರಣೆಗೆ ಸೂಚನೆ: ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ವಿತರಣೆ ಮಾಡುವ ಪೂರಕ ಪೌಷ್ಠಿಕ ಅಹಾರಗಳಾದ ಮೊಟ್ಟೆ, ಬಾಳೆಹಣ್ಣು ಹಾಗೂ ಶೇಂಗಾಚಿಕ್ಕಿ ಉತ್ತಮ ಗುಣಮಟ್ಟದಿಂದ ಕೂಡಿರಬೇಕು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಶಿಕ್ಷಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಉತ್ತಮ ಗುಣಮಟ್ಟದ ಮೊಟ್ಟೆಗಳನ್ನೇ ಖರೀದಿಸಬೇಕು. ಯಾವುದೇ ಕಾರಣಕ್ಕೂ ಕಾಟಾಚಾರಕ್ಕೆ, ಕಳಪೆ ಗುಣಮಟ್ಟದ ಮೊಟ್ಟೆಗಳನ್ನು ವಿತರಿಸಬಾರದು. ಇದರಿಂದ ಮಕ್ಕಳ ಆರೋಗ್ಯಕ್ಕೆ ತೊಂದರೆಯಾಗಲಿದೆ. ಪೂರಕ ಪೌಷ್ಠಿಕ ಆಹಾರ ವಿತರಣೆಯಲ್ಲಿ ಲೋಪ-ದೋಷ ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಇತ್ತೀಚಿನ ದಿನಗಳಲ್ಲಿ ಶಾಲಾ ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗಳಿಗೆ ದಾಖಲಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಿಟ್ಟಿನಲ್ಲಿ ಶಾಲಾ ಶಿಕ್ಷಕರು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಭಾವಿಸಿ, ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸಬೇಕು. ಜೊತೆಗೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಾಕೀತು ಮಾಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ ಮಾತನಾಡಿ, ಕಳೆದ ಮೂರು ವರ್ಷಗಳಿಂದ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಶಾಸಕರು ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಸುಮಾರು ರೂ.30 ಕೋಟಿ ಅನುದಾನವನ್ನು ಪ್ರಾಥಮಿಕ ಶಾಲೆಗಳಿಗೆ ನೀಡಿದ್ದಾರೆ ಎಂದರು.
ಕೆಎಂಇಆರ್‍ಸಿ ಯೋಜನೆಯಡಿಯಲ್ಲಿ ಶಿಕ್ಷಣಕ್ಕಾಗಿ ರೂ.120 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಕ್ರಿಯಾಯೋಜನೆಯಿಂದ ಶಿಕ್ಷಣ ಇಲಾಖೆ ಕ್ರಾಂತಿಕಾರಿ ಬದಲಾವಣೆ ಕಾಣಲಿದೆ ಎಂದು ಹೇಳಿದರು.
ಚಿತ್ರದುರ್ಗ ತಾಲ್ಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹುಲಿಕುಂಟರಾಯಪ್ಪ ಮಾತನಾಡಿ, 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ, ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು, ಶೇಂಗಾಚಿಕ್ಕಿ ವಿತರಣೆ ಮಾಡಲಾಗುತ್ತಿದೆ. ಮಕ್ಕಳಲ್ಲಿನ ರಕ್ತಹೀನತೆ, ಅಪೌಷ್ಠಿಕತೆ ಹೋಗಲಾಡಿಸುವ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಈ ಪೂರಕ ಪೌಷ್ಠಿಕ ಆಹಾರ ವಿತರಣೆ ಯೋಜನೆ ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಸಮನ್ವಯಾಧಿಕಾರಿ ಸಂಪತ್ ಕುಮಾರ್, ಐಯುಡಿಪಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಗೌಸ್ ಫಯಾಜ್ ಹಾಗೂ ಎಸ್‍ಡಿಎಂಸಿ ಅಧ್ಯಕ್ಷರು, ಸದಸ್ಯರು ಇದ್ದರು