ರಾಜ್ಯದಲ್ಲಿ ವಿದ್ಯಾರ್ಥಿಗಳ ಮೊಬೈಲ್ ಬಳಕೆಗೆ ಕಡಿವಾಣ ಹಾಕುವ ಬಗ್ಗೆ ಕರ್ನಾಟಕ ಸರ್ಕಾರ ಯೋಚನೆ ಮಾಡುತ್ತಿದೆ. 16 ವರ್ಷದೊಳಗಿನ ಮಕ್ಕಳಿಗೆ ಶಾಲೆ ಹಾಗೂ ಕಾಲೇಜು ಕ್ಯಾಂಪಸ್‌ನಲ್ಲಿ ಮೊಬೈಲ್ ಫೋನ್ ನಿಷೇಧ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗಿದೆ. ಸೋಶಿಯಲ್ ಮೀಡಿಯಾ ಹಾಗೂ ಮಾದಕ ವಸ್ತುಗಳ ವ್ಯಸನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಬಹುದೆಂಬ ಸುಳಿವು ದೊರೆತಿದೆ.
ಇಂದಿನ ದಿನಗಳಲ್ಲಿ ಯುವಕರು ಡ್ರಗ್ಸ್‌ಗೆ ಬಲಿಯಾಗುತ್ತಿದ್ದಾರೆ. ಸೋಶಿಯಲ್ ಮೀಡಿಯಾದ ಅತಿಯಾದ ಬಳಕೆ ಕೂಡ ಅವರಿಗೆ ಹಾನಿ ಮಾಡುತ್ತಿದೆ. ಹೀಗಾಗಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ಯೋಚನೆ ಇದೆ. ಈ ಬಗ್ಗೆ ಸಲಹೆ ನೀಡಿ ಎಂದು ಕುಲಪತಿಗಳಿಂದ ಅಭಿಪ್ರಾಯವನ್ನು ಮುಖ್ಯಮಂತ್ರಿಗಳು ಕೇಳಿದ್ದಾರೆ.
ಸರ್ಕಾರದ ಯೋಚನೆ ಪ್ರಕಾರ, ಇದು ಎಲ್ಲರಿಗೂ ಅನ್ವಯಿಸುವ ನಿಯಮವಲ್ಲ. 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮಾತ್ರ ಶಾಲೆ ಮತ್ತು ಕಾಲೇಜು ಕ್ಯಾಂಪಸ್ ಒಳಗೆ ಮೊಬೈಲ್ ಬಳಕೆಗೆ ನಿರ್ಬಂಧ ಇರಬಹುದು. ಮನೆ ಅಥವಾ ಹೊರಗೆ ಬಳಕೆಗೆ ಸಂಪೂರ್ಣ ನಿಷೇಧ ಇರುವುದಿಲ್ಲ ಎಂದು ಹೇಳಲಾಗಿದೆ.




