ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಮತದಾರರೇ ಹೆಚ್ಚು : ಮತಗಟ್ಟೆ, ದೂರು, ಭದ್ರತೆ ಕುರಿತು ಮಹತ್ವದ ಮಾಹಿತಿ ನೀಡಿದ ಚುನಾವಣಾಧಿಕಾರಿ ಆರ್.ಚಂದ್ರಯ್ಯ

2 Min Read

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಮಾರ್ಚ್.31): ವಿಧಾನಸಭಾ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದ್ದು, ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದೆ. ಚುನಾವಣೆಗೆ ಸಂಬಂಧಿಸಿದಂತೆ ಕಳೆದ ಮೂರು ತಿಂಗಳಿಂದಲೂ ಮತದಾರರ ಪಟ್ಟಿ, ಇವಿಎಂ ಯಂತ್ರ ಸೇರಿದಂತೆ ಎಲ್ಲ ರೀತಿಯ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಆಗಿರುವ ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ ಹೇಳಿದರು.

ಇಲ್ಲಿನ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿ 125 ಮತಗಟ್ಟೆಗಳು, ಗ್ರಾಮೀಣ ಭಾಗದ ವ್ಯಾಪ್ತಿಯಲ್ಲಿ 158 ಮತಗಟ್ಟೆಗಳು ಸೇರಿದಂತೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 283 ಮತಗಟ್ಟೆಗಳಿವೆ.

1,28,521 ಪುರುಷ ಮತದಾರರು, 1,31,572 ಮಹಿಳಾ ಮತದಾರರು ಹಾಗೂ 35 ಇತರೆ ಮತದಾರರು ಸೇರಿದಂತೆ ಒಟ್ಟು 2,60,128 ಮಂದಿ ಮತದಾರರಿದ್ದಾರೆ. ಇನ್ನೂ ಕೂಡ ಮತದಾರರ ಪಟ್ಟಿಗೆ ಸೇರ್ಪಡೆಗೆ ಅವಕಾಶ ಇದೆ ಎಂದು ತಿಳಿಸಿದರು.

ನಗರಸಭೆ ಆಯುಕ್ತರು ಹಾಗೂ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 283 ಮತಗಟ್ಟೆಗಳಲ್ಲಿ ಅಗತ್ಯವಾಗಿ ಇರಬೇಕಾದ ಎಲ್ಲ ಮೂಲಸೌಕರ್ಯ ಒದಗಿಸಿ ಮತಗಟ್ಟೆಗಳನ್ನು ಸುಸಜ್ಜಿತಗೊಳಿಸಿದ್ದಾರೆ ಎಂದರು.

ಈಗಾಗಲೇ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಏಪ್ರಿಲ್ 13 ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುವುದು. ಏಪ್ರಿಲ್ 20 ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ.

ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ನಾಮಪತ್ರಗಳನ್ನು ಹಿಂಪಡೆಯಲು ಕಡೆಯ ದಿನವಾಗಿದೆ. ಮೇ 10 ರಂದು ಮತದಾನ ನಡೆಯಲಿದೆ. ಮೇ 13 ಮತ ಎಣಿಕೆ ಕಾರ್ಯ ನಡೆದು, ಚುನಾವಣೆ ಫಲಿತಾಂಶ ಹೊರ ಬಿಳಲಿದೆ. ಮೇ 15 ರ ಒಳಗೆ ಚುನಾವಣೆ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ ಎಂದರು.

ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಚಿತ್ರದುರ್ಗ ವಿಧಾನಸಭಾ  ಕ್ಷೇತ್ರದಲ್ಲಿ ಹಲವು ತಂಡಗಳ ರಚನೆ ಮಾಡಲಾಗಿದೆ. ಎಫ್‍ಎಸ್‍ಟಿ-3 ತಂಡಗಳು, ಎಸ್‍ಎಸ್‍ಟಿ-7 ತಂಡಗಳು, ವಿಎಸ್‍ಟಿ-3 ತಂಡಗಳು ಹಾಗೂ ಒಂದು ವಿಡಿಯೋ ವಿವಿಂಗ್ ತಂಡ, ಒಂದು ಲೆಕ್ಕಪತ್ರ ತಂಡಗಳು ದಿನದ 24 ಗಂಟೆಯೂ ಮೂರು ಪಾಳಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.

ತಂಡಗಳ ಜವಾಬ್ದಾರಿ ಕುರಿತು ಈಗಾಗಲೇ ಜಿಲ್ಲಾಮಟ್ಟದಲ್ಲಿ ಮೂರು ಬಾರಿ ಚುನಾವಣಾ ತರಬೇತಿ ನೀಡಿ, ಅವಶ್ಯಕವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿದೆ. 21 ಮಂದಿ ಸೆಕ್ಟರ್ ಅಧಿಕಾರಿಗಳು ಕಳೆದ ಒಂದು ತಿಂಗಳಿಂದಲೂ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಚುನಾವಣಾ ನೀತಿ ಸಂಹಿತೆಗೆ ಸಂಬಂಧಪಟ್ಟಂತೆ ದೂರುಗಳು ಇದ್ದರೆ ಈಗಾಗಲೇ ಸಹಾಯವಾಣಿ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಸಹಾಯವಾಣಿ ಕೇಂದ್ರಕ್ಕೆ ಅಧಿಕಾರಿ, ಸಿಬ್ಬಂದಿ ನಿಯೋಜಿಸಿ, ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಮತದಾರರಿಗೆ ಆಮಿಷವೊಡ್ಡುವ ಪ್ರಕರಣಗಳು ಕಂಡುಬಂದರೆ ಸಹಾಯವಾಣಿ ಸಂಖ್ಯೆ 08194-222416 ಗೆ ಕರೆ ಮಾಡಿದರೆ ಅಗತ್ಯ ಕ್ರಮ ವಹಿಸಲಾಗುವುದು. ಇದರ ಜೊತೆಗೆ ಸಿ-ವಿಜಿಲ್ ಆಪ್ ಮೂಲಕವೂ ಸಾರ್ವಜನಿಕರು ಚುನಾವಣಾ ದೂರು ಸಲ್ಲಿಸಬಹುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಹಾಯಕ ಚುನಾವಣಾಧಿಕಾರಿ ತಹಶೀಲ್ದಾರ್ ಡಾ.ನಾಗವೇಣಿ,  ನೋಡಲ್ ಅಧಿಕಾರಿ ತಾಲ್ಲೂಕು ಪಂಚಾಯಿತಿ ಇಒ ಹನುಮಂತಪ್ಪ, ಪೊಲೀಸ್ ನೋಡಲ್ ಅಧಿಕಾರಿ ಸಿಪಿಐ ಬಾಲಚಂದ್ರನಾಯ್ಕ್ ಇದ್ದರು.

Share This Article
Leave a Comment

Leave a Reply

Your email address will not be published. Required fields are marked *