ಬೆಂಗಳೂರು: ಬಿಜೆಪಿ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಲೋಕಸಭಾ ಚುನಾವಣೆಗೆ ಎಲ್ಲಾ ತಯಾರಿ ನಡೆಯುತ್ತಿದೆ. ಎರಡು ಪಕ್ಷದಿಂದ ನಮ್ಮಲ್ಲಿಗೆ ಬರ್ತಾರೆ ಅಂತ ಆಗಾಗ ಕಾಂಗ್ರೆಸ್ ನಾಯಕರು ಹೇಳುವ ಮಾತಿಗೆ ತಕ್ಕ ಹಾಗೆ ಬೆಳವಣಿಗೆಗಳು ನಡೆಯುತ್ತಿವೆ. ಇಂದು ಹೊನ್ನಾಳಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.
ಹೊನ್ನಾಳಿ ಕ್ಷೇತ್ರದಲ್ಲಿ ಈ ಬಾರಿ ಸೋತಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆಯಿಂದ ಸ್ಪರ್ಧಿಸುವ ಯೋಜನೆ ಹಾಕಿಕೊಂಡಿದ್ದಾರೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ಅವರನ್ನು ಇಂದು ಅವರ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ.
ಇನ್ನು ಮೂಲಗಳ ಪ್ರಕಾರ, ರೇಣುಕಾಚಾರ್ಯ ಅವರು ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಜೊತೆಗೆ ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಸಿಎಂ ಬಳಿಕ ಡಿಸಿಎಂ ಭೇಟಿ ಮಾಡಿ, ತಮ್ಮ ಕ್ಷೇತ್ರದಲ್ಲಿರುವ ಬರಗಾಲದ ಬಗ್ಗೆಯೂ ಚರ್ಚಿಸಿದ್ದಾರೆ. ಅಷ್ಟೇ ಅಲ್ಲ, ಬಿಜೆಪಿಯಲ್ಲಿ ಸೋತವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನವೂ ನಡೆದಿಲ್ಲ ಎಂದು ಬೇಸರ ಹೊರ ಹಾಕಿದ್ದಾರೆ ಎನ್ನಲಾಗಿದೆ.