ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಾಹಂ ರಾಜ್ಯ ಪಾಲರಿಗೆ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದಾರೆ. ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟೀಸ್ ನೀಡಿದ್ದಾರೆ. ಆದರೆ ಈ ನೋಟೀಸ್ ಅನ್ನು ಜುಲೈ 27ರಂದೇ ನೀಡಿದ್ದು, ಸಿಎಂ ಸಿದ್ದರಾಮಯ್ಯ ಅವರು ಇನ್ನು ಉತ್ತರ ನೀಡಿಲ್ಲ ಎನ್ನಲಾಗಿದೆ.
ಸಾಮಾಜಿಕ ಹೋರಾಟಗಾರ ನೀಡಿದ ದೂರಿನ ಅನ್ವಯ, ನೋಟೀಸ್ ನೀಡಲಾಗಿದೆ. ಮುಖ್ಯಮಂತ್ರಿ ಅಧಿಕಾರ ದುರುಪಯೋಗ ಪಡಿಸಿಕೊಂಡು ಅಕ್ರಮ ನಡೆಸಿದ್ದಾರೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ 55,80 ಕೋಟಿ ನಷ್ಟವಾಗಿದೆ. ಈ ಬಗ್ಗೆ ತನಿಖೆಗಾಗಿ ಅವರ ವಿರುದ್ಧ ಭ್ರಷ್ಟಚಾರ ಕಾಯ್ದೆಯ 7,9,11,12 ಮತ್ತು 13ನೇ ಸೆಕ್ಷನ್ ಗಳ ಅಡಿಯಲ್ಲಿ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸುವ ಅಗತ್ಯವಿದೆ. ಮೂಡಾ ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕೆಂದು ಅಬ್ರಾಹಂ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಆರೋಪಗಳ ಕುರಿತು ಸಿದ್ದರಾಮಯ್ಯ ಅವರಿಂದ ಮಾಹಿತಿ ಪಡೆಯಲು ರಾಜ್ಯಪಾಲರು ನೋಟೀಸ್ ನೀಡಿದ್ದಾರೆ. ಇನ್ನು ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ನೋಟೀಸ್ ಗೆ ಉತ್ತರ ನೀಡುವ ಬಗ್ಗೆ ಹಾಗೂ ಸರ್ಕಾರದ ಮುಂದಿನ ಹೆಜ್ಜೆಯ ಬಗ್ಗೆ ನಿರ್ಧಾರ ಮಾಡಲಾಗುತ್ತದೆ. ಹಾಗೇ ಈ ಸಭೆಯ ಉಸ್ತುವಾರಿಯನ್ನು ಡಿಸಿಎಂ ಡಿಕೆ ಶಿವಕುಮಾರ್ ವಹಿಸಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಸಭೆಯಿಂದ ದೂರ ಉಳಿಯಲಿದ್ದಾರೆ. ಸಭೆಯ ಬಳಿಕ ಯಾವ ರೀತಿಯ ತೀರ್ಮಾನ ಮಾಡಿದ್ದಾರೆ ಎಂಬುದು ತಿಳಿಯಲಿದೆ.