ಸುದ್ದಿಒನ್, ಚಿತ್ರದುರ್ಗ, ಜುಲೈ. 06: ಐತಿಹಾಸಿಕ ಹಿನ್ನೆಲೆ ಹೊಂದಿರುವ ಚಿತ್ರದುರ್ಗ ನಗರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಪ್ರವಾಸಿಗರನ್ನು ಕೈಬೀಸಿ ಕರೆಯುವಂತ ನಗರವನ್ನಾಗಿ ರೂಪಿಸುವುದು ನನ್ನ ಮೂಲ ಉದ್ದೇಶವಾಗಿದೆ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಹೇಳಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ಸೋಮವಾರ ನಡೆದ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚಿತ್ರದುರ್ಗವು ಏಳು ಸುತ್ತಿನ ಕಲ್ಲಿನ ಕೋಟೆಯನ್ನು ಹೊಂದಿರುವ ಐತಿಹಾಸಿಕ ಪ್ರವಾಸಿ ತಾಣವಾಗಿದೆ. ಪ್ರತಿದಿನ ಸಾವಿರಾರು ಪ್ರವಾಸಿಗರು ಜಿಲ್ಲೆಗೆ ಆಗಮಿಸುತ್ತಾರೆ. ಆದರೆ, ನಗರದ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸಿ, ಪ್ರವಾಸಿಗರು ನೆನಪಿನಲ್ಲಿಟ್ಟುಕೊಳ್ಳುವಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಕೈಜೋಡಿಸುವುದು ಅಗತ್ಯ ಎಂದು ಹೇಳಿದರು.
ತುರುವನೂರಿನಲ್ಲಿ ನಿರ್ಮಿತಿ ಕೇಂದ್ರದ ವತಿಯಿಂದ ನಿರ್ಮಿಸಿರುವ ಮಾದರಿ ಉದ್ಯಾನದಂತೆಯೇ ಚಿತ್ರದುರ್ಗ ನಗರದ ಮಧ್ಯಭಾಗದಲ್ಲೂ ಸುಂದರ ಉದ್ಯಾನಗಳನ್ನು ನಿರ್ಮಿಸಬೇಕು. ಅಲ್ಲದೆ, ನಗರದ ಪ್ರಮುಖ ರಸ್ತೆಗಳಲ್ಲಿ ಸೋಲಾರ್ ಬೀದಿ ದೀಪಗಳನ್ನು ಅಳವಡಿಸಿ ರಾತ್ರಿ ವೇಳೆಯಲ್ಲೂ ನಗರ ಆಕರ್ಷಕವಾಗಿ ಕಾಣುವಂತೆ ಯೋಜನೆ ರೂಪಿಸಿ ಜಾರಿಗೆ ತರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮುರುಘಾ ಮಠದ ಕೆರೆಯ ಅಭಿವೃದ್ಧಿ ವಿಚಾರದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಬಾರದು. ಕೆರೆಗೆ ಘನ ತ್ಯಾಜ್ಯ ಸೇರುವುದನ್ನು ತಡೆಯಲು ಅಗತ್ಯ ಕ್ರಮ ಕೈಗೊಂಡು, ಕೆರೆಯನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಆಕರ್ಷಿಸುವ ತಾಣವನ್ನಾಗಿ ರೂಪಿಸಬೇಕು. ಬಾಕಿ ಉಳಿದಿರುವ ಕಾಮಗಾರಿಗಳನ್ನು ಸಂಬAಧಪಟ್ಟ ಇಲಾಖೆಗಳ ಸಹಯೋಗದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಚಿತ್ರದುರ್ಗ ಎಂದರೆ ಐತಿಹಾಸಿಕ ಏಳು ಸುತ್ತಿನ ಕೋಟೆ ನೆನಪಾಗುತ್ತದೆ. ಅದೇ ರೀತಿಯಲ್ಲಿ ನಗರದ ಮಧ್ಯಭಾಗದಲ್ಲಿರುವ ಐತಿಹಾಸಿಕ ಪುಷ್ಕರಣಿಗಳ ಅಭಿವೃದ್ಧಿಗೂ ಆದ್ಯತೆ ನೀಡಬೇಕು. ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರಸಭೆ ಅಧಿಕಾರಿಗಳು ಜಂಟಿಯಾಗಿ ಅಧ್ಯಯನ ನಡೆಸಿ ಸಂಪೂರ್ಣ ವರದಿಯನ್ನು ಮುಂದಿನ ಸಭೆಯಲ್ಲಿ ಸಲ್ಲಿಸಬೇಕು ಎಂದು ತಿಳಿಸಿದರು.
ಜಿಲ್ಲಾಸ್ಪತ್ರೆ ಎದುರಿನ ಸ್ವಾಮಿ ವಿವೇಕಾನಂದ ಉದ್ಯಾನವನ್ನು ಇನ್ನಷ್ಟು ಅಭಿವೃದ್ಧಿಪಡಿಸಬೇಕು. ಉದ್ಯಾನದೊಳಗೆ ಕೆಲ ವ್ಯಾಪಾರಿಗಳು ಕಸ ಸುರಿಯುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ನಗರಸಭೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಉದ್ಯಾನದ ಮಧ್ಯಭಾಗದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಿ ಸಾರ್ವಜನಿಕರಿಗೆ ಉತ್ತಮ ಪರಿಸರ ಕಲ್ಪಿಸುವಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ನಗರದ ವಿವಿಧ ಉದ್ಯಾನಗಳನ್ನು ಸಂಪೂರ್ಣ ಅಭಿವೃದ್ಧಿಪಡಿಸಿ ಸಾರ್ವಜನಿಕರಿಗೆ ಉತ್ತಮ ಪರಿಸರ ಒದಗಿಸಬೇಕು. ಇನ್ನೂ ಅಭಿವೃದ್ಧಿಯಾಗಬೇಕಿರುವ ಉದ್ಯಾನಗಳ ಕಾಮಗಾರಿಗಳನ್ನೂ ಆದ್ಯತೆಯೊಂದಿಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಚಿತ್ರದುರ್ಗ ನಗರ ಪ್ರವೇಶ ದ್ವಾರಗಳಲ್ಲಿ “ಐ ಲವ್ ಚಿತ್ರದುರ್ಗ” ಮಾದರಿಯ ಆಕರ್ಷಕ ಸ್ವಾಗತ ಚಿಹ್ನೆಗಳನ್ನು ನಿರ್ಮಿಸಬೇಕು. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆ ಸುಧಾರಣೆಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ತಿಮ್ಮಣ್ಣ ನಾಯಕನ ಕೆರೆಗೆ ಸಂಪರ್ಕಿಸುವ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು. ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಬರುವ ಸಾರ್ವಜನಿಕ ದೂರುಗಳಿಗೆ ಇಲಾಖೆಯಿಂದಲೇ ಸಮಯೋಚಿತ ಉತ್ತರ ನೀಡಬೇಕು. ಜೊತೆಗೆ, ನಗರದ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ರೂಪಿಸಿ ಜಾರಿಗೆ ತರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಮಾತನಾಡಿ, ನಗರಾಭಿವೃದ್ಧಿ ಪ್ರಾಧಿಕಾರವು ಚಿತ್ರದುರ್ಗದ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು. ನಗರದ ವೈಶಿಷ್ಟ್ಯವನ್ನು ಪ್ರತಿಬಿಂಬಿಸುವAತಹ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡುವುದು ಅಗತ್ಯ ಎಂದು ಹೇಳಿದರು.
ಸಭೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್ ಪೀರ್, ಸದಸ್ಯರಾದ ದೇವರಾಜ್, ಅಂಜಿನಪ್ಪ, ಸುರೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸೋಮಶೇಖರ್, ನಗರಸಭೆ ಆಯುಕ್ತೆ ಲಕ್ಷ್ಮಿ, ಅಧಿಕಾರಿಗಳಾದ ಡಾ. ಕಾಶಿ, ಮಲ್ಲೇಶ್ ನಾಯಕ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.


















