ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ :  ಸಾರ್ವಜನಿಕರು ಸಂಚಾರಿ ನಿಯಮಗಳನ್ನು ತಪ್ಪದೇ ಪಾಲಿಸಿ : ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ.

2 Min Read

 

ಚಿತ್ರದುರ್ಗ ಜ. 17 : ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ, ಚಿತ್ರದುರ್ಗ ಪ್ರಾದೇಶಿಕ ಸಾರಿಗೆ ಕಚೇರಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಇದೇ ಜನವರಿ 16 ರಿಂದ 23 ರವರೆಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಹೇಳಿದರು.

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಾಗೃತಿ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಿದ ಅವರು, ಅಪಘಾತ ಸಂಖ್ಯೆಗಳನ್ನು ಕಡಿಮೆಗೊಳಿಸಿ, ಜನರ ಜೀವ ರಕ್ಷಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜ. 16 ರಿಂದ ಜ. 23 ರವರೆಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಯೋಜಿಸಲಾಗಿದೆ.  ಸಾರ್ವಜನಿಕರು ಸಂಚಾರಿ ನಿಯಮಗಳನ್ನು ಪಾಲಿಸುವ ಮೂಲಕ ಹಾಗೂ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಮೂಲಕ ಅಪಘಾತಗಳನ್ನು ತಡೆಗಟ್ಟಬಹುದಾಗಿದೆ.  ಸುರಕ್ಷತಾ ಸಪ್ತಾಹದ ಅಂಗವಾಗಿ ಜಿಲ್ಲೆಯಲ್ಲಿ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯಕ್ರಮಗಳನ್ನು ಏರ್ಪಡಿಸುವಂತೆ ಸೂಚನೆ ನೀಡಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಕಾಳೆ ಸಿಂಘೆ ಅವರು ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕುರಿತು ಮಾಹಿತಿ ನೀಡಿ, ಸಪ್ತಾಹವನ್ನು ಪರಿಣಾಮಕಾರಿಯಾಗಿಸಲು ಹಾಗೂ ಸಾರ್ವಜನಿಕರಲ್ಲಿ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಚಾಲನಾ ತರಬೇತಿ ಶಾಲೆಯ ಸಿಬ್ಬಂದಿಗೆ ತರಬೇತಿ ನೀಡಲಾಗುವುದು, ಬೀದಿ ನಾಟಕಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುವುದು.

ಎಲ್ಲ ವರ್ಗದ ವಾಹನಗಳ ತಪಾಸಣೆಯನ್ನು ತೀವ್ರಗೊಳಿಸಲಾಗುವುದು, ಹೆಲ್ಮೆಟ್ ಧರಿಸುವುದು, ಸೀಟ್‍ಬೆಲ್ಟ್ ಧರಿಸಿ ವಾಹನ ಚಾಲನೆ, ರಸ್ತೆ ಪಥ ಶಿಸ್ತು ನಿರ್ವಹಣೆ ಕುರಿತು ಅರಿವು ಮೂಡಿಸಲಾಗುವುದು, ಶಾಲೆಗಳಲ್ಲಿ ರಸ್ತೆ ಸುರಕ್ಷತಾ ವಿಷಯ ಕುರಿತು ಪ್ರಬಂಧ ಸ್ಪರ್ಧೆ, ಚಿತ್ರ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಗುವುದು, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ವಿಷಯ ಕುರಿತು ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗುವುದು.  ಸಾರ್ವಜನಿಕರು ಕೂಡ ಸಂಚಾರಿ ನಿಯಮಗಳನ್ನು ತಪ್ಪದೆ ಪಾಲಿಸುವ ಮೂಲಕ ರಸ್ತೆ ಅಪಘಾತಗಳನ್ನು ತಪ್ಪಿಸಲು ನೆರವಾಗಬೇಕು ಎಂದರು.

ಜಿ.ಪಂ. ಸಿಇಇ ಎಸ್.ಜೆ. ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್, ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹರೀಶ್, ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಹಿರಿಯ ಮೋಟಾರು ವಾಹನ ನಿರೀಕ್ಷಕ ಪಿ.ಎಂ. ಶಾನಭಾಗ್, ಅಧೀಕ್ಷಕ ಹೇಮಂತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *