ದೆಹಲಿ, ಸೆ.1: NEET ಪರೀಕ್ಷೆಯಲ್ಲಿನ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳ ಆರೋಪ ಖಂಡಿಸಿ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದೇಶದ ವಿವಿಧೆಡೆ ದಾಖಲಾಗಿದ್ದ ಎಲ್ಲಾ ಎಫ್ಐಆರ್ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಸಂವಿಧಾನದ ವಿಧಿ 142ರ ಅಡಿಯಲ್ಲಿ ತನ್ನ ವಿಶೇಷ ಅಧಿಕಾರವನ್ನು ಬಳಸಿದ ನ್ಯಾಯಾಲಯ, ಜುಲೈ 20ರಿಂದ 25ರವರೆಗೆ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಮುಂದುವರಿಸಬಾರದು ಎಂದು ನಿರ್ದೇಶಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠ ಈ ಮಹತ್ವದ ಆದೇಶ ನೀಡಿದೆ.

ಪ್ರತಿಭಟನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಮತ್ತು ಯುವಕರಿಗೆ ಕ್ರಿಮಿನಲ್ ಪ್ರಕರಣಗಳಿಂದ ಯಾವುದೇ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ. ಕೇವಲ ಪ್ರತಿಭಟನೆಯಲ್ಲಿ ಭಾಗವಹಿಸಿರುವುದನ್ನೇ ಅಪರಾಧವೆಂದು ಪರಿಗಣಿಸಬಾರದು ಎಂದೂ ಪೀಠ ಸ್ಪಷ್ಟಪಡಿಸಿದೆ.
ದೇಶಾದ್ಯಂತ ಅನ್ವಯವಾಗಲಿದೆ ಆದೇಶ
ಜುಲೈ 20ರಿಂದ 25ರವರೆಗೆ ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದ ಎಫ್ಐಆರ್ಗಳನ್ನು ತನಿಖೆ ಅಥವಾ ವಿಚಾರಣೆಗೆ ಒಳಪಡಿಸಬಾರದು. ಈಗಾಗಲೇ ದಾಖಲಾಗಿರುವ ಪ್ರಕರಣಗಳನ್ನು ಎಲ್ಲ ಉದ್ದೇಶಗಳಿಗೂ ಮುಕ್ತಾಯಗೊಂಡ ಪ್ರಕರಣಗಳೆಂದು ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ಅಲ್ಲದೆ, ಇದೇ ಘಟನೆಗಳಿಗೆ ಸಂಬಂಧಿಸಿದಂತೆ ಮುಂದೆ ಯಾವುದೇ ಹೊಸ ಎಫ್ಐಆರ್ ದಾಖಲಿಸಬಾರದು ಎಂದು ನ್ಯಾಯಾಲಯ ಆದೇಶಿಸಿದೆ. ದೆಹಲಿ ಪೊಲೀಸರು ಹಾಗೂ ಕೇಂದ್ರ ಸರ್ಕಾರದ ಜೊತೆಗೆ ಮಹಾರಾಷ್ಟ್ರ, ಅಸ್ಸಾಂ, ಬಿಹಾರ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ಪ್ರಕರಣಗಳನ್ನು ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದವು.











