ಬೆಂಗಳೂರು : ಕರ್ನಾಟಕದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಗುರುವಾರ ಅಧಿಕೃತ ಹೇಳಿಕೆ ನೀಡಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಸ್ಥಾನಕ್ಕೆ ಡಿಕೆ ಶಿವಕುಮಾರ್ ಅವರ ಹೆಸರನ್ನು ಪಕ್ಷ ಪ್ರಕಟಿಸಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ಸಚಿವ ಸಂಪುಟ ಸೇರುವ ಸಂಭಾವ್ಯ ಶಾಸಕರ ಪಟ್ಟಿಯೂ ಹೊರಬಿದ್ದಿದೆ.
ಡಾ. ಜಿ.ಪರಮೇಶ್ವರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಬಿ.ರಾಮಲಿಂಗಾ ರೆಡ್ಡಿ, ರೂಪಾ ಶಶಿಧರ್, ಈಶ್ವರ ಖಂಡ್ರೆ, ಜಮೀರ್ ಅಹಮದ್, ತನ್ವೀರ್ ಸೇಠ್, ಲಕ್ಷ್ಮಣ ಸವದಿ, ಕೃಷ್ಣ ಬೈರೇಗೌಡ ಇವರು ಸಂಭಾವ್ಯ ಸಚಿವರು ಎಂದು ತಿಳಿದು ಬಂದಿದೆ.
ಡಾ. ಜಿ.ಪರಮೇಶ್ವರ್ ಅವರು ಈ ಹಿಂದೆ ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಸುದೀರ್ಘ ಕಾಲ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿದ್ದರಲ್ಲದೆ, ರಾಜ್ಯ ಸರ್ಕಾರದಲ್ಲಿ ಹಲವು ಸಚಿವ ಸ್ಥಾನಗಳನ್ನು ಅಲಂಕರಿಸಿದ್ದರು.
ಮಾಜಿ ಸಂಸದ ಎಂ.ಬಿ.ಪಾಟೀಲ್ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿಯೂ ಕೆಲಸ ಮಾಡಿದ್ದರು. ಮತ್ತು ಪ್ರಭಾವಿ ಲಿಂಗಾಯತ ನಾಯಕರು. ಇನ್ನು ಕೆಜೆ ಜಾರ್ಜ್ ಪಕ್ಷದ ಹಿರಿಯ ನಾಯಕರಾಗಿದ್ದು,
ಎಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಸರಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರ ಹೆಸರು ಕೂಡಾ ನೂತನ ಸಚಿವರ ಪಟ್ಟಿಯಲ್ಲಿದೆ.
2016ರಲ್ಲಿ ಆಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಐಟಿ, ಬಿಟಿ ಮತ್ತು ಪ್ರವಾಸೋದ್ಯಮ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪ್ರಿಯಾಂಕ್ ಖರ್ಗೆ ಪಾತ್ರರಾಗಿದ್ದರು.ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.
ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಅವರ ಪುತ್ರಿ ರೂಪಾ ಶಶಿಧರ್ ಅವರ ಹೆಸರೂ ಕೂಡಾ ನೂತನ ಸಚಿವರ ಪಟ್ಟಿಯಲ್ಲಿ ಇದೆ. ಈಶ್ವರ ಖಂಡ್ರೆ ಅವರು ಈ ಹಿಂದೆ ಸಿದ್ದರಾಮಯ್ಯ ಅವರ ಸಂಪುಟದಲ್ಲಿ 2016 ರಿಂದ 2018 ರವರೆಗೆ ಪೌರಾಡಳಿತ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ತನ್ವೀರ್ ಸೇಠ್ ಅವರು 2016 ರಿಂದ 2018 ರವರೆಗೆ ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದರು.
ಮಾಜಿ ಸಚಿವ ಕೃಷ್ಣ ಬೈರೇಗೌಡ ಅವರ ಹೆಸರೂ ಸಚಿವ ಸ್ಥಾನದ ರೇಸ್ ನಲ್ಲಿದೆ. ಸಿದ್ದರಾಮಯ್ಯ ಸರ್ಕಾರದ ನೂತನ ಸಚಿವರ ಪಟ್ಟಿಯಲ್ಲಿ ಲಕ್ಷ್ಮಣ ಸವದಿ ಅವರ ಹೆಸರೂ ಇದೆ. ಸವದಿ ಈ ಹಿಂದೆ ಬಿಜೆಪಿ ಸರಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದರು.