ನೂತನ ಸರ್ಕಾರ ಅಧಿಕಾರಕ್ಕೆ : ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರ ಪ್ರಮಾಣ ವಚನ ಸ್ವೀಕಾರ..

suddionenews
2 Min Read

ಬೆಂಗಳೂರು, (ಮೇ.20): ಕರ್ನಾಟಕದಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು.

ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರೊಂದಿಗೆ 8 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಬೆಂಗಳೂರಿನ ಶ್ರೀ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕಾಂಗ್ರೆಸ್ ನ ರಾಷ್ಟ್ರೀಯ ನಾಯಕರು, ವಿವಿಧ ಪಕ್ಷಗಳ ನಾಯಕರು ಮತ್ತು ಚಿತ್ರರಂಗದ ಗಣ್ಯರು ಭಾಗವಹಿಸಿದ್ದರು.

ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಅವರೊಂದಿಗೆ 8 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಡಾ.ಜಿ.ಪರಮೇಶ್ವರ್, ಪ್ರಿಯಾಂಕ ಖರ್ಗೆ,  ಕೆ.ಪಿ.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಬಿ.ಜಡ್.ಜಮೀರ್ ಅಹಮದ್ ಖಾನ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸಮಾರಂಭದಲ್ಲಿ ಕಾಂಗ್ರೆಸ್‌ನ ಪ್ರಮುಖ ನಾಯಕರು ಉಪಸ್ಥಿತರಿದ್ದರು . ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಭಾಗವಹಿಸಿದ್ದರು.

ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳಾದ ಛತ್ತೀಸ್‌ಗಢ ಸಿಎಂ ಭೂಪೇಶ್ ಬಾಘೇಲ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಮತ್ತು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಉಪಸ್ಥಿತರಿದ್ದರು.

ಇವರೊಂದಿಗೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಭಾಗವಹಿಸಿದ್ದರು.

ಕಂಠೀರವ ಕ್ರೀಡಾಂಗಣಕ್ಕೆ ವಿವಿಧ ರಾಜ್ಯಗಳ ವಿರೋಧ ಪಕ್ಷಗಳ ಮುಖ್ಯಮಂತ್ರಿಗಳು, ವಿವಿಧ
ಪಕ್ಷಗಳ ಮುಖಂಡರು ಆಗಮಿಸಿದ್ದರು.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಉಪಸ್ಥಿತರಿದ್ದರು. ಬಿಹಾರ ಮುಖ್ಯಮಂತ್ರಿ ಹಾಗೂ ಜೆಡಿಯು ನಾಯಕ ನಿತೀಶ್ ಕುಮಾರ್ ಭಾಗವಹಿಸಿದ್ದರು. ಬಿಹಾರ ಉಪಮುಖ್ಯಮಂತ್ರಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಸಿದ್ದರಾಮಯ್ಯನವರ ಪಟ್ಟಾಭಿಷೇಕಕ್ಕೆ ವಿವಿಧ ಪಕ್ಷಗಳ ಸಿಪಿಐ, ಸಿಪಿಎಂ ಮುಖಂಡರಾದ
ರಾಜಾ ಮತ್ತು ಸೀತಾರಾಂ ಯೆಚೂರಿ ಭಾಗವಹಿಸಿದ್ದರು. ಕಂಠೀರವ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದ ಪ್ರಮಾಣ ವಚನ ಸಮಾರಂಭದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಭಾಗವಹಿಸಿದ್ದರು. ದುನಿಯಾ ವಿಜಯ್, ಹಿರಿಯ ನಟ ಹಾಗೂ ಮಕ್ಕಳ್ ನೀದಿ ಮೈಯಂ ಪಕ್ಷದ ನಾಯಕ ಕಮಲ್ ಹಾಸನ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಆಗಮಿಸಿದವರಿಂದ ಕಿಕ್ಕಿರಿದು ತುಂಬಿತ್ತು.  ಭಾರಿ ಜನಸ್ತೋಮದ ನಡುವೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.
ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ವೀಕ್ಷಿಸಿದರು.

Share This Article
Leave a Comment

Leave a Reply

Your email address will not be published. Required fields are marked *