ಬೆಂಗಳೂರು: ಚಂದನವನದ ನಟಿ ಕೃಷಿ ತಾಪಂಡ ಅವರ ನಿವಾಸದಲ್ಲಿ ವೈಶಾಕ್ ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ವೈಶಾಕ್ ಅವರ ಪತ್ನಿ ಮೇಘನಾ ಅವರು ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರಿನಲ್ಲಿ ವೈಶಾಕ್ ಮತ್ತು ಕೃಷಿ ತಾಪಂಡ ನಡುವೆ ಆಪ್ತ ಸಂಬಂಧವಿದ್ದ ಬಗ್ಗೆ ಉಲ್ಲೇಖಿಸಿರುವ ಮೇಘನಾ, ಕಳೆದ ಒಂದು ತಿಂಗಳಿನಿಂದ ತಮ್ಮ ಮತ್ತು ವೈಶಾಕ್ ನಡುವೆ ಮನಸ್ತಾಪ ಉಂಟಾಗಿತ್ತು ಎಂದು ತಿಳಿಸಿದ್ದಾರೆ. ಈ ಅವಧಿಯಲ್ಲಿ ವೈಶಾಕ್ ತಮ್ಮ ಪುತ್ರನ ಕುರಿತು ಸಂದೇಶಗಳ ಮೂಲಕ ಮಾಹಿತಿ ಪಡೆದುಕೊಳ್ಳುತ್ತಿದ್ದರು ಎಂದೂ ದೂರಿನಲ್ಲಿ ಹೇಳಿದ್ದಾರೆ. ವೈಶಾಕ್ ಅವರು ವೀರಭದ್ರನಗರದಲ್ಲಿ ಆಟೋಮೊಬೈಲ್ ಅಂಗಡಿ ನಡೆಸುತ್ತಿದ್ದರು ಎಂಬ ಮಾಹಿತಿಯನ್ನೂ ಪೊಲೀಸರಿಗೆ ನೀಡಿದ್ದಾರೆ.
ಬುಧವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಪೊಲೀಸರು ವೈಶಾಕ್ ಅವರ ತಂದೆಗೆ ಕರೆ ಮಾಡಿ, ಎಲಿಗೆಂಟ್ ಟೆರಸ್ ಅಪಾರ್ಟ್‌ಮೆಂಟ್‌ನ ಫ್ಲಾಟ್ ನಂ.403ರಲ್ಲಿ ವೈಶಾಕ್ ಮೃತದೇಹ ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಕುಟುಂಬದವರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ನಟಿ ಕೃಷಿ ತಾಪಂಡ ಅವರ ಫ್ಲಾಟ್‌ನ ಕೋಣೆಯೊಂದರ ಹಾಸಿಗೆಯ ಮೇಲೆ ವೈಶಾಕ್ ಅವರ ಮೃತದೇಹ ಕಂಡುಬಂದಿದೆ ಎನ್ನಲಾಗಿದೆ.ಪ್ರಾಥಮಿಕ ಮಾಹಿತಿಯ ಪ್ರಕಾರ, ವೈಶಾಕ್ ಅವರು ಸೀರೆಯನ್ನು ಬಳಸಿಕೊಂಡು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಸೀರೆಯ ತುಂಡು ಸಹ ಪತ್ತೆಯಾಗಿದ್ದು, ಕುತ್ತಿಗೆಯ ಭಾಗದಲ್ಲಿ ಗುರುತುಗಳು ಕಂಡುಬಂದಿವೆ ಎಂದು ತಿಳಿದುಬಂದಿದೆ.
ತಮ್ಮ ಪತಿಯ ಸಾವಿನ ಬಗ್ಗೆ ಯಾರ ಮೇಲೂ ಅನುಮಾನವಿಲ್ಲ ಎಂದು ಮೇಘನಾ ದೂರಿನಲ್ಲಿ ಉಲ್ಲೇಖಿಸಿದ್ದರೂ, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಮರಣೋತ್ತರ ಪರೀಕ್ಷೆ ಹಾಗೂ ಸಮಗ್ರ ತನಿಖೆ ನಡೆಸುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.ಗಮನಾರ್ಹವಾಗಿ, ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕಳೆದ ಫೆಬ್ರುವರಿಯಲ್ಲಿ ಎಚ್‌ಎಎಲ್ ಠಾಣೆ ಪೊಲೀಸರು ವೈಶಾಕ್ ಅವರನ್ನು ಬಂಧಿಸಿದ್ದರು. ಬಳಿಕ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











