ಸುದ್ದಿಒನ್,ಬೆಂಗಳೂರು,ಮೇ.12: ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಹಾಗೂ ಟೈಮರ್ ಪತ್ತೆಯಾಗಿರುವ ಗಂಭೀರ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ಹಸ್ತಾಂತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ಇಂದು ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಧಿಕೃತ ಮಾಹಿತಿ ನೀಡಿದರು.
ಪ್ರಧಾನಿಗಳ ಭೇಟಿಯ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದ ಸಂದರ್ಭದಲ್ಲಿ, ಅವರು ಸಂಚರಿಸುವ ಮಾರ್ಗದ ರಸ್ತೆಯಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದವು. ಇದು ಕೇವಲ ಜಿಲೆಟಿನ್ ಕಡ್ಡಿಯಷ್ಟೇ ಅಲ್ಲದೆ, ಅಲ್ಲಿ ಟೈಮರ್ ಕೂಡ ಪತ್ತೆಯಾಗಿರುವುದು ತನಿಖಾ ಸಂಸ್ಥೆಗಳ ಕಳವಳಕ್ಕೆ ಕಾರಣವಾಗಿದೆ.
ಪ್ರಧಾನಿ ಬರುವ ಎರಡು ಗಂಟೆಗಳ ಮುಂಚಿತವಾಗಿ, ಅಂದರೆ ಬೆಳಿಗ್ಗೆ 9 ಗಂಟೆಗೆ ಸ್ಫೋಟಕಗಳನ್ನು ಪತ್ತೆ ಹಚ್ಚುವ ಮೂಲಕ ನಮ್ಮ ಪೊಲೀಸರು ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಇದು ಶ್ಲಾಘನೀಯ ಕೆಲಸ. ಈ ಸ್ಫೋಟಕಗಳ ಮೂಲ ಮತ್ತು ಇದರ ಹಿಂದಿರುವ ಸಂಚಿನ ಆಳ-ಅಗಲ ತಿಳಿಯಲು ಎನ್ಐಎ ತನಿಖೆಯ ಅಗತ್ಯವಿದೆ ಎಂದು ಸಚಿವರು ತಿಳಿಸಿದರು.
ಈ ಕೃತ್ಯದ ಹಿಂದೆ ಭಯೋತ್ಪಾದನಾ ಸಂಘಟನೆಗಳ ಕೈವಾಡವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸದ್ಯಕ್ಕೆ ಈ ಬಗ್ಗೆ ಏನನ್ನೂ ಹೇಳಲು ಸಾಧ್ಯವಿಲ್ಲ. ಟೆರರಿಸಂ ಲಿಂಕ್ ಇರುವ ಬಗ್ಗೆ ತನಿಖೆಯ ನಂತರವಷ್ಟೇ ಸ್ಪಷ್ಟತೆ ಸಿಗಲಿದೆ. ಯಾವುದೇ ದುಷ್ಟ ಶಕ್ತಿಗಳ ಕೈವಾಡವಿದ್ದರೂ ಅವರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








