ಸುದ್ದಿಒನ್,ಬೆಂಗಳೂರು,ಜೂನ್.03: ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ನಾಯಕತ್ವದ ಚರ್ಚೆಗೆ ಕೊನೆಗೂ ತೆರೆ ಬಿದ್ದಿದೆ. ಕಾಂಗ್ರೆಸ್ನ ಹಿರಿಯ ನಾಯಕ ಡಿ.ಕೆ. ಶಿವಕುಮಾರ್ ಅವರು ಇಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬೆಳವಣಿಗೆಯೊಂದಿಗೆ ಸರ್ಕಾರದ ಪ್ರಮುಖ ಹುದ್ದೆಗಳ ಹಂಚಿಕೆ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ವೇಗ ಪಡೆದುಕೊಂಡಿವೆ.
ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸಚಿವ ಸಂಪುಟದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಡಾ. ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಹೆಚ್ಚಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪಕ್ಷದ ಒಳವಲಯದಲ್ಲೂ ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಸದ್ಯದ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಒಂದಕ್ಕಿಂತ ಹೆಚ್ಚು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವ ಪ್ರಸ್ತಾವನೆಗೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ ಪರಮೇಶ್ವರ್ ಅವರು ಏಕೈಕ ಡಿಸಿಎಂ ಆಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ದಟ್ಟವಾಗಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹರಿಪ್ರಸಾದ್ ಹೆಸರು
ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ತೆರವಾಗಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಸ್ಥಾನಕ್ಕೆ ಹೊಸ ಮುಖದ ಆಯ್ಕೆ ಕುರಿತು ಚರ್ಚೆಗಳು ಜೋರಾಗಿವೆ. ಈ ಪೈಕಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ.ಪಕ್ಷದ ಉನ್ನತ ನಾಯಕತ್ವ ಶೀಘ್ರದಲ್ಲೇ ಹರಿಪ್ರಸಾದ್ ಅವರನ್ನು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಘೋಷಿಸುವ ಸಾಧ್ಯತೆ ಇದೆ ಎಂದು ಮೂಲಗಳು ಸೂಚಿಸಿವೆ.
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ಕುರಿತ ಬೆಳವಣಿಗೆಗಳು ರಾಜ್ಯ ರಾಜಕೀಯದಲ್ಲಿ ಹೊಸ ಸಮೀಕರಣಗಳಿಗೆ ಕಾರಣವಾಗಲಿದ್ದು, ಮುಂದಿನ ಕೆಲವು ದಿನಗಳು ಕಾಂಗ್ರೆಸ್ ಪಾಳಯದಲ್ಲಿ ಮಹತ್ವದ ತೀರ್ಮಾನಗಳ ಸಾಕ್ಷಿಯಾಗುವ ಸಾಧ್ಯತೆ ಇದೆ.















