ಸುದ್ದಿಒನ್,ಬೆಂಗಳೂರು,ಮೇ.10: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಸಂಭ್ರಮದ ವಾತಾವರಣ ಮನೆಮಾಡಲಿದೆ. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45ನೇ ವಾರ್ಷಿಕೋತ್ಸವ ಹಾಗೂ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ.
ಇಂದು ಬೆಳಿಗ್ಗೆ 9 ಗಂಟೆಗೆ ಪ್ರಧಾನಿ ಮೋದಿ ಅವರು ಎಚ್ಎಎಲ್ (HAL) ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ವಿಮಾನ ನಿಲ್ದಾಣಕ್ಕೆ ಬಂದಿಳಿದ ನಂತರ, ರಾಜ್ಯ ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡಿರುವ ವಿಶೇಷ ಸನ್ಮಾನ ಸಮಾರಂಭದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಅಂತರರಾಷ್ಟ್ರೀಯ ಕೇಂದ್ರಕ್ಕೆ ಭೇಟಿ ನೀಡಿ, ವಾರ್ಷಿಕೋತ್ಸವ ಮತ್ತು ಗುರೂಜಿಯವರ ಜನ್ಮದಿನದ ಸಂಭ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಭೇಟಿಯ ಪ್ರಮುಖ ಆಕರ್ಷಣೆಯೆಂದರೆ, ಆಶ್ರಮದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಧ್ಯಾನ ಮಂದಿರದ ಲೋಕಾರ್ಪಣೆ. ಆಂತರಿಕ ಶಾಂತಿ ಮತ್ತು ಸಮಗ್ರ ಯೋಗಕ್ಷೇಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಮಂದಿರವನ್ನು ಅತ್ಯಂತ ಭವ್ಯವಾಗಿ ನಿರ್ಮಿಸಲಾಗಿದ್ದು, ಪ್ರಧಾನಿ ಮೋದಿ ಇದನ್ನು ಉದ್ಘಾಟಿಸಲಿದ್ದಾರೆ.

















