ಹಾವೇರಿ: ಜಿಲ್ಲೆಯ ಹಾನಗಲ್ ನಲ್ಲಿ ನಡೆದ ಮಹಿಳೆ ಮೇಲಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ಈ ಪ್ರಕರಣವನ್ನು ಮುಚ್ಚಿ ಹಾಕುವುದರಲ್ಲಿ ಪೊಲೀಸರು ಭಾಗಿಯಾಗಿದ್ದಾರೆಂದು ಗಂಭೀರ ಆರೋಪ ಮಾಡಿದ್ದಾರೆ.
ಪೊಲೀಸರು ರಾಜ್ಯ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡಿದ್ದಾರೆ. ಅಲ್ಲಿ ನೀಚ ಕೃತ್ಯ ನಡೆದಿದೆ. ಈ ವಿಚಾರದಲ್ಲಿ ರಾಜಕೀಯ ಮಾಡಬಾರದು. ಅಲ್ಪ ಸಂಖ್ಯಾತ ಮಹಿಳೆಗೆ ರಕ್ಷಣೆ ಇಲ್ಲ ಎಂದರೆ ಈ ಸರ್ಕಾರ ಏಕೆ ಇರಬೇಕು. ಈ ಪ್ರಕರಣವನ್ನು ಸರ್ಕಾರ ಹಗುರವಾಗಿ ತೆಗೆದುಕೊಂಡಿದೆ. ಕಾಂಗ್ರೆಸ್ ಸರ್ಕಾರ ಬಂದಾಗಲೇ ಕಾನೂನು ಸಿವ್ಯವಸ್ಥೆ ಹದಗೆಟ್ಟಿದೆ ಎಂದಿದ್ದಾರೆ.
ಹಾವೇರಿ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಈ ಪ್ರಕರಣವನ್ನು ನಾನು ಕೂಡ ಖಂಡಿಸುತ್ತೇನೆ. ಹಾನಗಲ್ ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆ ದೂರು ನೀಡಿದ್ದಾರೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಏಳು ಜನ ಆರೋಪಿಗಳು ಹಾನಗಲ್ ತಾಲೂಕಿನ ಅಕ್ಕಿ ಆಲೂರಿನವರು. ನ್ಯಾಯಾಧೀಶರ ಮುಂದೆ ಸಂತ್ರಸ್ಥ ಮಹಿಳೆ ಹೇಳಿಕೆ ಸಹ ನೀಡಿದ್ದಾರೆ. ನಿಷ್ಪಕ್ಷಪಾತ ತನಿಖೆ ಮಾಡುವಂತೆ ಹಾವೇರಿ ಸ್ಪಿಗೆ ಸೂಚಿಸಲಾಗಿದೆ. ಈ ಬಗ್ಗೆ ಕೆಲವರು ಟೀಕೆ ಟಿಪ್ಪಣಿ ಮಾಡ್ತಿದ್ದಾರೆ. ಸಂತ್ರಸ್ತ ಮಹಿಳೆಗೆ ನ್ಯಾಯ ಕೊಡಿಸಲು ಬದ್ಧವಾಗಿದ್ದೇವೆ ಎಂದಿದ್ದಾರೆ.