Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರಿನಲ್ಲಿ ನ. 21ರಂದು ಸಿಎಂ ನೇತೃತ್ವದಲ್ಲಿ ಪ್ರಜಾಸೇವಾ ಆಂದೋಲನ : ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ ಎಸ್. ರಮ್ಯಾ

---Advertisement---

ಚಿತ್ರದುರ್ಗ.ನ.18: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹಿರಿಯೂರು ನಗರದ (ಕಡಲೆಕಾಯಿ ಮಂಡಿ) ನೆಹರು ಮೈದಾನದಲ್ಲಿ ಇದೇ ನವೆಂಬರ್ 21ರಂದು ಶನಿವಾರ ಬೆಳಿಗ್ಗೆ 11ಕ್ಕೆ ಪ್ರಜಾಸೇವಾ ಆಂದೋಲನ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಬುಧವಾರ ಹಿರಿಯೂರು ನಗರಸಭೆ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎಸ್. ರಮ್ಯಾ ಅವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಯಿತು.

ಸಾರ್ವಜನಿಕರ ಕುಂದುಕೊರತೆಗಳನ್ನು ಮತ್ತು ಸರ್ಕಾರಿ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ ಎಂಬ ಧ್ಯೇಯವಾಕ್ಯದೊಂದಿಗೆ ಸರ್ಕಾರ ಪ್ರಜಾಸೇವಾ ಅಭಿಯಾನ ಜಾರಿಗೆ ತಂದಿದೆ. ಪ್ರಜಾ ಸೇವಾ ಆಂದೋಲನದ ಸಭೆ ಕಾರ್ಯಕ್ರಮದ ಯಶಸ್ಸಿಗೆ ಕೈಗೊಳ್ಳಬೇಕಾದ ಸಿದ್ಧತೆಗಳು ಹಾಗೂ ಸಾರ್ವಜನಿಕರಿಗೆ ತಲುಪಿಸಬೇಕಾದ ಸರ್ಕಾರಿ ಯೋಜನೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಎಸ್. ರಮ್ಯಾ, ಮುಖ್ಯಮಂತ್ರಿಗಳು ಕಾರ್ಯಕ್ರಮದ ವೇಳೆ ಪ್ರತಿ ಮಳಿಗೆಗೂ ಭೇಟಿ ನೀಡಿ ಪರಿಶೀಲಿಸುವುದರಿಂದ, ಎಲ್ಲಾ ಇಲಾಖೆಗಳು ತಮ್ಮ ಇತ್ತೀಚಿನ ಯೋಜನೆಗಳು ಮತ್ತು ಸಾಧನೆಗಳನ್ನು ಅರ್ಥಪೂರ್ಣವಾಗಿ ಪ್ರದರ್ಶಿಸಬೇಕು. ಸಾರ್ವಜನಿಕರಿಗೆ ಉಪಯುಕ್ತವಾಗುವಂತಹ ಮಾಹಿತಿ ಮತ್ತು ಪ್ರಾತ್ಯಕ್ಷಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಕೈಗಾರಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಪ್ರದರ್ಶನಕ್ಕೆ ಮಳಿಗೆಗಳನ್ನು ವ್ಯವಸ್ಥೆ ಮಾಡಬೇಕು. ವಿಶೇಷವಾಗಿ ಸಾವಯವ ಕೃಷಿ, ಜೈವಿಕ ಗೊಬ್ಬರ, ನೂತನ ಕೃಷಿ ತಂತ್ರಜ್ಞಾನ ಹಾಗೂ ಪೌಷ್ಟಿಕಾಂಶ ಅಭಿಯಾನದ ಕುರಿತು ವಿಶೇಷ ಮಳಿಗೆಗಳನ್ನು ತೆರೆಯಲು ಸೂಚಿಸಿದರು.

ಕೃಷಿ ಇಲಾಖೆಯ ಮುಖ್ಯಮಂತ್ರಿಗಳ ನೇಗಿಲ ಯೋಗಿ ಯೋಜನೆ, ರೇಷ್ಮೆ ಇಲಾಖೆಯ ನೂತನ ಕಾರ್ಯಕ್ರಮಗಳು ಹಾಗೂ ಬೆಳೆ ವಿಮೆ ಪರಿಹಾರ ವಿತರಣೆಯ ಪ್ರಗತಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಬೆಳೆ ಕಟಾವು ಪ್ರಯೋಗಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ, ಅರ್ಹ ರೈತರಿಗೆ ಶೀಘ್ರವಾಗಿ ವಿಮಾ ಪರಿಹಾರ ದೊರಕಿಸಿಕೊಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯ ನಂತರ ಜಿಲ್ಲಾಧಿಕಾರಿ ಎಸ್.ರಮ್ಯಾ ಮತ್ತು ವಿವಿಧ ಇಲಾಖಾ ಮುಖ್ಯಸ್ಥರು ಪ್ರಜಾಸೇವಾ ಆಂದೋಲನಾ ಸಭೆ ಕಾರ್ಯಕ್ರಮ ನಡೆಯುವ ಹಿರಿಯೂರು ನಗರದ ನೆಹರು ಮೈದಾನಕ್ಕೆ ಭೇಟಿ ನೀಡಿ, ಮಳಿಗೆಗಳ ನಿರ್ಮಾಣಕ್ಕೆ ಇರುವ ಸ್ಥಳಾವಕಾಶವನ್ನು ಪರಿಶೀಲಿಸಿದರು.

ಸಾರ್ವಜನಿಕರಿಂದ ಈಗಾಗಲೇ ಸ್ವೀಕರಿಸಲಾದ ಹಾಗೂ ಕಾರ್ಯಕ್ರಮದ ದಿನದಂದು ಸ್ವೀಕರಿಸುವ ಅರ್ಜಿಗಳನ್ನು ವ್ಯವಸ್ಥಿತವಾಗಿ ದಾಖಲಿಸಿ, ಶೀಘ್ರವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now