ಬೆಂಗಳೂರು.ಆಗಸ್ಟ್.13: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶಗಳನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ಆಚರಿಸಲು ಸಂಘಟನೆಗಳು ಮನವಿ ಮಾಡಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ವಿಶೇಷವಾಗಿ ಬೆಂಗಳೂರು, ಮಂಡ್ಯ ಮತ್ತು ಮೈಸೂರು ಸೇರಿದಂತೆ ಕಾವೇರಿ ವಿಚಾರಕ್ಕೆ ಸಂಬಂಧಿಸಿದ ಪ್ರಮುಖ ಜಿಲ್ಲೆಗಳಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಪ್ರತಿಭಟನೆ ವೇಳೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಪೊಲೀಸರು ನಿಗಾ ವಹಿಸುತ್ತಿದ್ದಾರೆ.
ಆದರೆ ಬಂದ್‌ಗೆ ರಾಜ್ಯದಾದ್ಯಂತ ನಿರೀಕ್ಷಿತ ಪ್ರತಿಕ್ರಿಯೆ ಕಂಡುಬಂದಿಲ್ಲ. ಬೆಂಗಳೂರಿನಲ್ಲಿ ಬೆಳಗ್ಗಿನಿಂದಲೇ ಬಿಎಂಟಿಸಿ ಸೇರಿದಂತೆ ಸಾರಿಗೆ ಬಸ್‌ಗಳ ಸಂಚಾರ ಬಹುತೇಕ ಸಹಜವಾಗಿದೆ. ಖಾಸಗಿ ವಾಹನಗಳ ಓಡಾಟವೂ ಎಂದಿನಂತೆ ಮುಂದುವರಿದಿದ್ದು, ಬಹುತೇಕ ಅಂಗಡಿ-ಮುಂಗಟ್ಟುಗಳು ತೆರೆದಿವೆ.
ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣೆಯಲ್ಲಿಯೂ ಯಾವುದೇ ದೊಡ್ಡ ಪ್ರಮಾಣದ ವ್ಯತ್ಯಯ ಕಂಡುಬಂದಿಲ್ಲ. ಹೀಗಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ಕರ್ನಾಟಕ ಬಂದ್ ಪ್ರತಿಭಟನೆಗೆ ಸೀಮಿತವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇನ್ನು ಕಾವೇರಿ ಹೋರಾಟದ ಪ್ರಮುಖ ಕೇಂದ್ರವಾಗಿರುವ ಮಂಡ್ಯದಲ್ಲಿ ಬಂದ್‌ಗೆ ಹೆಚ್ಚಿನ ಬೆಂಬಲ ವ್ಯಕ್ತವಾಗುವ ಸಾಧ್ಯತೆ ಇದ್ದು, ಹಲವು ಪ್ರದೇಶಗಳಲ್ಲಿ ವ್ಯಾಪಾರ-ವಹಿವಾಟು ಸ್ಥಗಿತಗೊಳ್ಳುವ ನಿರೀಕ್ಷೆ ಇದೆ. ಪರಿಸ್ಥಿತಿ ಸೂಕ್ಷ್ಮವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ನಿರಂತರವಾಗಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.









