ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.26 : ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಒತ್ತಾಯಿಸಿ ಕಾರ್ಮಿಕ ನಿರೀಕ್ಷಕರ ಕಚೇರಿ ಎದುರು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
2022-23 ನೇ ಸಾಲಿನಲ್ಲಿ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿದ ಕಾರ್ಮಿಕರಿಗೆ ಇದುವರೆವಿಗೂ ಸಹಾಯಧನ ಬಿಡುಗಡೆಯಾಗಿಲ್ಲ ಎಂದು ಪ್ರತಿಭಟನಾಕಾರರು ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ರಾಜ್ಯ ಉಪಾಧ್ಯಕ್ಷ ಸಿ.ಕೆ.ಗೌಸ್‍ಪೀರ್ ಮಾತನಾಡಿ ಶೈಕ್ಷಣಿಕ ಧನ ಸಹಾಯವನ್ನು ಕೂಡಲೆ ಬಿಡುಗಡೆಗೊಳಿಸಬೇಕು. 2021-22 ನೇ ಸಾಲಿನಲ್ಲಿ 1.5 ಲಕ್ಷ ಫಲಾನುಭವಿಗಳಿಗೆ ಬಾಕಿ ಉಳಿಸಿಕೊಂಡಿರುವ ಶೈಕ್ಷಣಿಕ ಧನ ಸಹಾಯವನ್ನು ತುರ್ತಾಗಿ ನೀಡಬೇಕು. ಇಪ್ಪತ್ತೈದು ಸಾವಿರ ರೂ. ಬೆಲೆ ಬಾಳುವ ಲ್ಯಾಪ್‍ಟಾಪನ್ನು 75 ಸಾವಿರ ರೂ.ಗಳಿಗೆ ಖರೀಧಿಸಿ ಅವ್ಯವಹಾರ ಎಸಗಿರುವುದನ್ನು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ಹಿಂದಿನ ಬಿ.ಜೆ.ಪಿ.ಸರ್ಕಾರದಲ್ಲಿ ಖರೀದಿಯಲ್ಲಾಗಿರುವ ಅಕ್ರಮವನ್ನು ತನಿಖೆಗೆ ಆದೇಶಿಸಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಮದುವೆ, ಪಿಂಚಣಿ, ವೈದ್ಯಕೀಯ ಸೌಲಭ್ಯಗಳಿಗೆ ಸಲ್ಲಿಸಿರುವ ನೂರಾರು ಅರ್ಜಿಗಳು ಇತ್ಯರ್ಥವಾಗದೆ ಬಾಕಿ ಉಳಿದಿರುವುದನ್ನು ಪುರಸ್ಕರಿಸಿ ಹಣ ಪಾವತಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದೆಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದರು.
ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಜಿಲ್ಲಾ ಸಮಿತಿ ಅಧ್ಯಕ್ಷ ಬಿ.ಸಿ.ನಾಗರಾಜಚಾರಿ, ಖಜಾಂಚಿ ಉಮೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸಣ್ಣಮ್ಮ, ತಾಲ್ಲೂಕು ಸಹ ಕಾರ್ಯದರ್ಶಿ ಧರ್ಮಣ್ಣ, ಜಿಲ್ಲಾ ಸಹ ಕಾರ್ಯದರ್ಶಿ ಭಾಸ್ಕರಾಚಾರಿ, ಅಬ್ದುಲ್ಲಾ, ಜಿಕ್ರಿಯ, ರಾಘವೇಂದ್ರ, ಇಸ್ಮಾಯಿಲ್, ಕಂಪಳಪ್ಪ, ರಂಗಸ್ವಾಮಿ, ಮಲ್ಲಿಕಾರ್ಜುನ್, ದ್ರಾಕ್ಷಾಯಣಮ್ಮ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.