ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಆಗಸ್ಟ್ 01 ರಂದು ಪ್ರತಿಭಟನೆ : ಚಳ್ಳಕೆರೆ ಶ್ರೀನಿವಾಸ್

2 Min Read

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜು. 30 : ಒಳ ಮೀಸಲಾತಿ ಜಾರಿಗಾಗಿ ಕಳೆದ 35 ವರ್ಷಗಳಿಂದಲೂ ಪ್ರತಿಭಟನೆ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ವ್ಯವಸ್ಥಿತವಾಗಿ ಮಾದಿಗರನ್ನು ವಂಚಿಸುತ್ತ ಬರುತ್ತಿರುವುದರಿಂದ ಈ ಬಾರಿ ಒಳ ಮೀಸಲಾತಿ ಜಾರಿಯಾಗುವತನಕ ನಮ್ಮ ಹೋರಾಟ ನಿಲ್ಲುವುದಿಲ್ಲವೆಂದು ರಾಜ್ಯ ಸರ್ಕಾರಕ್ಕೆ ಚಳ್ಳಕೆರೆ ಶ್ರೀನಿವಾಸ್ ಎಚ್ಚರಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿಯನ್ನು ಜಾರಿ ಮಾಡುವಂತೆ ಆಗ್ರಹಿಸಿ ಕಳೆದ ಮೂರುವರೆ ದಶಕಗಳಿಂದ ನಿರಂತರವಾಗಿ ಹೋರಾಟವನ್ನು ನಡೆಸಲಾಗುತ್ತಿದೆ. ಆದರೆ ಫಲ ಪ್ರಧವಾಗಿರಲಿಲ್ಲ, ಈ ಮಧ್ಯೆ ಒಳ ಮೀಸಲಾತಿ ಜಾರಿಗೊಳಿ ಸುವಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿ 2024 ಆ.1 ಕ್ಕೆ ಒಳ ಮೀಸಲಾತಿಯನ್ನು ಜಾರಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶವನ್ನು ನೀಡಿದರು ಸಹಾ ಇಲ್ಲಿಗೆ ಒಂದು ವರ್ಷ ಪೂರೈಸುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನುಷ್ಟಾನಕ್ಕೆ ತರಲು ಮೀನಾಮೇಷ ಎಣಿಸುತ್ತಿದ್ದಾರೆ ಎಂದು ದೂರಿದರು.

ರಾಜ್ಯ ಸರ್ಕಾರದ ವಿಳಂಬ ಧೋರಣೆಯನ್ನು ಖಂಡಿಸಿ ಆ. 1 ರಂದು ರಾಜ್ಯದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಲಾಗುತ್ತದೆ ಈ ಹಿನ್ನಲೆಯಲ್ಲಿ ಚಿತ್ರದುರ್ಗದಲ್ಲಿ ಆ, 1 ರ ಶುಕ್ರವಾರ ಬೆಳಿಗ್ಗೆ 11 ಗಂಟೆಯಿಂದ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಪ್ರತಿಭಟನೆಯನ್ನು ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದೆಂದು ತಿಳಿಸಿ ಈ ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಕಾರಜೋಳ ಹಾಗೂ ಮಾಜಿ ಸಂಸದ ಎ.ನಾರಾಯಣಸ್ವಾಮಿರವರ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ನಾಲ್ಕರಿಂದ ಐದು ಸಾವಿರ ಜನ ಸೇರುವ ನಿರೀಕ್ಷೆಯಿಂದ ಪ್ರತಿ ತಾಲ್ಲೂಕಿನಿಂದಲೂ ಮಾದಿಗ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಸಮುದಾಯದ ಮುಖಂಡರಾದ ಜಿ.ಹೆಚ್.ಮೋಹನ್ ಕುಮಾರ್ ಮಾತನಾಡಿ ಮೂರವರೆ ದಶಕಗಳಿಂದಲೂ ಒಳ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಅರೆ ಬೆತ್ತಲೆ ಮೆರವಣಿಗೆ, ಹೋರಾಟ, ಚಳುವಳಿಗಳನ್ನು ಮಾಡಿದ್ದೇವೆ. ಮಾದಿಗರ ಮತಗಳನ್ನು ಪಡೆದಿರುವ ಕಾಂಗ್ರೆಸ್ ಪಕ್ಷ ನಮ್ಮನ್ನು ನಡು ಬೀದಿಯಲ್ಲಿ ನಿಲ್ಲಿಸಿದೆ. ಸುಪ್ರೀಂಕೋರ್ಟ್ ಒಳ ಮೀಸಲಾತಿ ಜಾರಿಗೊಳಿಸುವಂತೆ ತೀರ್ಪು ನೀಡಿ ಆ.1 ಕ್ಕೆ ಒಂದು ವರ್ಷವಾಗುತ್ತದೆ. ಹಾಗಾಗಿ ಅಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

2008 ರಲ್ಲಿ ಸದಾಶಿವ ಆಯೋಗವನ್ನು ರಚಿಸಲಾಯಿತು. ಈಗ ದತ್ತಾಂಶ ಸಂಗ್ರಹಕ್ಕಾಗಿ ನಾಗಮೋಹನ್ ದಾಸ್ ಆಯೋಗವನ್ನು ರಚಿಸಿದೆ.ಆದರೆ ಇದು ಮಾದಿಗರ ಬೇಡಿಕೆಯಲ್ಲ.ಆದ್ದರಿಂದ ರಾಜ್ಯ ಸರ್ಕಾರಕ್ಕೆ ಚುರುಕು ಮುಟ್ಟಿಸಲು ಪ್ರತಿಭಟನಾ ಮೆರವಣಿಗೆ ಹೊರಡಲಿದೆ. ಆ.11 ರಿಂದ ಆರಂಭಗೊಳ್ಳುವ ಅಧಿವೇಶನದಲ್ಲಿ ಒಳ ಮೀಸಲಾತಿ ಕುರಿತು ವರದಿ ಮಂಡನೆ ಚರ್ಚೆಯಾಗಬೇಕು. ಮುಂದೂಡುವ ಪ್ರಯತ್ನ ಮಾಡಿದರೆ ಉಗ್ರ ಹೋರಾಟ ನಡೆಸಲಾಗುವುದೆಂದು ಹೇಳಿದರು.

ಚನ್ನಗಾನಹಳ್ಳಿ ಮಲ್ಲೇಶ್ ಮಾತನಾಡಿ ಮಾದಿಗರ ಮತಗಳನ್ನು ಪಡೆದು ಅಧಿಕಾರದಲ್ಲಿ ಕುಳಿತಿರುವ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸದಿರುವುದನ್ನು ವಿರೋಧಿಸಿ ಆ.1 ರಂದು ಪ್ರತಿಭಟನೆಗೆ ಮುಂದಾಗಿದ್ದೇವೆ. ನಮ್ಮ ಸಮುದಾಯ ಇನ್ನಾದರೂ ಎಚ್ಚೆತ್ತುಕೊಂಡು ಹೋರಾಟಕ್ಕೆ ಬರಬೇಕೆಂದು ವಿನಂತಿಸಿದರು.

ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಜಯಣ್ಣ, ಗ್ರಾಮ ಪಂಚಾಯಿತಿ ಸದಸ್ಯ ಗಿರೀಶ್, ಪರಶುರಾಂ, ಪ್ರಹ್ಲಾದ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *