ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ, (ಆ.13) : ನಗರ ಸೇರಿದಂತೆ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ವಾಣಿವಿಲಾಸ ಜಲಾಶಯದ ನೀರು ಹಾಗೂ ಶಾಂತಿಸಾಗರದ ನೀರು ಬಳಕೆ ಮಾಡಲಾಗುತ್ತಿದೆ. ಆದರೆ ಜನರಿಗೆ ಈ ನೀರು ಪೂರೈಕೆ ಮಾಡುವುದಕ್ಕೂ ಮುನ್ನ ಅಗತ್ಯ ಪ್ರಕ್ರಿಯೆಗಳ ಮೂಲಕ ಶುದ್ಧೀಕರಿಸಿದ ಬಳಿಕವೇ ನಳದ ಮೂಲಕ ನೀರು ಪೂರೈಕೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ತಿಳಿಸಿದ್ದಾರೆ.
ಜಿಲ್ಲೆಯ ಜನರಲ್ಲಿ ಶುದ್ಧ ಕುಡಿಯುವ ನೀರು ಮತ್ತು ಸ್ವಚ್ಛತೆ ಕುರಿತಂತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿಗಳ ಗೃಹ ಕಚೇರಿಯಲ್ಲಿ ಏರ್ಪಡಿಸಲಾದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಾರ್ವಜನಿಕರು ಯಾವುದೇ ವದಂತಿಗಳನ್ನು ನಂಬಬಾರದು, ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ. ಆದರೆ ಸಾರ್ವಜನಿಕರು ಕುದಿಸಿ, ಆರಿಸಿದ ನೀರನ್ನು ಬಳಸಬೇಕು. ಈ ರೀತಿ ಮಾಡುವುದರಿಂದ ಒಂದು ವೇಳೆ ನೀರಿನಲ್ಲಿ ಇರುವ ಯಾವುದೇ ಬ್ಯಾಕ್ಟೀರಿಯಾಗಳು ನಾಶವಾಗಿ, ನೀರು ಶುದ್ಧವಾಗುತ್ತದೆ. ಯಾವುದೇ ರೋಗ ರುಜಿನ ಹರಡುವುದಿಲ್ಲ. ಜನರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ನೀರು ಕುದಿಸಿ, ಆರಿಸಲು ತಗಲುವ 05 ನಿಮಿಷಗಳ ಸಮಯವು ತಮ್ಮ ಸದೃಢ ಆರೋಗ್ಯಕ್ಕೆ ಕಾರಣವಾಗುತ್ತದೆ ಎಂಬುದನ್ನು ಜನರು ಮರೆಯಬಾರದು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಂಗನಾಥ್, ಡಿಡಿಪಿಐ ರವಿಶಂಕರ ರೆಡ್ಡಿ, ಬಿಇಒ ನಾಗಭೂಷಣ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರಕುಮಾರ್, ನಗರಸಭೆ ಪೌರಾಯುಕ್ತ ಶ್ರೀನಿವಾಸ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.