ಚಿತ್ರದುರ್ಗ. ಅ.27: ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ಕರಡು ಮತದಾರರ ಪಟ್ಟಿಯನ್ನು ಶುಕ್ರವಾರದಂದು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಪ್ರಕಟಿಸಿದರು.
ಕರಡು ಮತದಾರರ ಪಟ್ಟಿ ಪ್ರಕಟ ಸಂಬಂಧ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಿದ ಜಿಲ್ಲಾಧಿಕಾರಿಗಳು ಮಾತನಾಡಿ, ಚುನಾವಣಾ ಆಯೋಗದ ನಿರ್ದೇಶನದಂತೆ ಶುಕ್ರವಾರದಂದು ಪಟ್ಟಿ ಪ್ರಕಟಿಸಲಾಗಿದೆ, ಇದೀಗ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವೂ ಕೂಡ ಪ್ರಾರಂಭವಾಗಿದ್ದು, ಸಾರ್ವಜನಿಕರು ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿ. 09 ಕೊನೆಯ ದಿನವಾಗಿದೆ.
ಮತದಾರರ ನೊಂದಣಿಗೆ ಸಂಬಂಧಿಸಿದಂತೆ ನವೆಂಬರ್ 18, 19, ಡಿಸೆಂಬರ್ 02 ಮತ್ತು 03 ರಂದು ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡು, ಅರ್ಹರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗುವುದು.
ಸದ್ಯ ಜಿಲ್ಲೆಯಲ್ಲಿ ಒಟ್ಟು 1661 ಮತಗಟ್ಟೆಗಳಿದ್ದು, 1401830 ಒಟ್ಟು ಮತದಾರರಿದ್ದಾರೆ. ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಳಿಸಲು ಅರ್ಹರಿರುವ ಎಲ್ಲರನ್ನೂ ಸೇರಿಸಲು, ವಿವಿಧ ರಾಜಕೀಯ ಪಕ್ಷಗಳು ಕೂಡ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಕುರಿತು ವ್ಯಾಪಕ ಪ್ರಚಾರ ನೀಡಬೇಕು, ರಾಜಕೀಯ ಪಕ್ಷದವರು ಪ್ರತಿಯೊಂದು ಮತಗಟ್ಟೆಗೂ ಮತಗಟ್ಟೆ ಮಟ್ಟದ ಏಜೆಂಟರನ್ನು ನೇಮಕ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಉಪವಿಭಾಗಾಧಿಕಾರಿ ಕಾರ್ತಿಕ್, ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.