ರಾಯಚೂರು.ಜುಲೈ.12: ರಾಯಚೂರು ನಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ನ ಹಿರಿಯ ಮುಖಂಡ ಸೈಯದ್ ಯಾಸಿನ್ (70) ಅವರು ವಯೋಸಹಜ ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ.
ಮಾಜಿ ಕೇಂದ್ರ ಸಚಿವ ದಿವಂಗತ ಜಾಫರ್ ಶರೀಫ್ ಅವರ ಅಳಿಯರಾಗಿದ್ದ ಯಾಸಿನ್ ಅವರು, ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಒಟ್ಟು ಆರು ಬಾರಿ ಸ್ಪರ್ಧಿಸಿದ್ದ ಸೈಯದ್ ಯಾಸಿನ್ ಅವರು, 1999 ಮತ್ತು 2008ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಭರ್ಜರಿ ಜಯ ಸಾಧಿಸಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ್ದರು. ಕೇವಲ ಶಾಸಕರಾಗಿ ಅಷ್ಟೇ ಅಲ್ಲದೆ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಅಧ್ಯಕ್ಷರಾಗಿ ಪಕ್ಷದ ಸಂಘಟನೆಯಲ್ಲಿ ಅತ್ಯಂತ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಮೃತರು ಪತ್ನಿ, ನಾಲ್ವರು ಪುತ್ರರು ಸೇರಿದಂತೆ ಅಪಾರ ಸಂಖ್ಯೆಯ ಬೆಂಬಲಿಗರು ಹಾಗೂ ಬಂಧು-ಬಳಗವನ್ನು ಅಗಲಿದ್ದಾರೆ. ಅವರ ನಿಧನಕ್ಕೆ ರಾಯಚೂರು ಜಿಲ್ಲೆಯ ಹಾಗೂ ರಾಜ್ಯದ ಪ್ರಮುಖ ರಾಜಕೀಯ ಮುಖಂಡರು ತೀವ್ರ ಸಂತಾಪ ಸೂಚಿಸಿದ್ದಾರೆ.






