ಬೆಂಗಳೂರು.ಜುಲೈ.29: ರಾಜ್ಯಾದ್ಯಂತ ಇಂದಿನಿಂದ ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಭಾಗಕ್ಕೆ ‘ಆರೆಂಜ್ ಅಲರ್ಟ್’ ಹಾಗೂ 28 ಜಿಲ್ಲೆಗಳಿಗೆ ‘ಯಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗಗಳಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಕರಾವಳಿ ತೀರದ ಸಾರ್ವಜನಿಕರು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಎಲ್ಲೋ ಅಲರ್ಟ್’ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಬೆಳಗಾವಿ, ಧಾರವಾಡ, ಹಾವೇರಿ ಸೇರಿದಂತೆ ಒಟ್ಟು 28 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.










