ಬೆಂಗಳೂರು.ಆಗಸ್ಟ್.17: ಕರ್ನಾಟಕದಲ್ಲಿ ಆಗಸ್ಟ್ ಮೂರನೇ ವಾರದಲ್ಲಿಯೂ ಮಳೆ ಮುಂದುವರಿಯಲಿದ್ದು, ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗಸ್ಟ್ 16 ರಿಂದ ಆಗಸ್ಟ್ 22 ರವರೆಗೆ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ತುಸು ಕಡಿಮೆಯಿರಲಿದೆ. ಆದರೆ, ಉತ್ತರ ಒಳನಾಡು ಹಾಗೂ ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ.
ಇಂದು ಧಾರವಾಡ, ಬೆಳಗಾವಿ, ಹಾವೇರಿ, ಕೊಪ್ಪಳ ಮತ್ತು ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದ ಸಾಧಾರಣ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ವಿಜಯಪುರ, ಕಲಬುರಗಿ, ಬಾಗಲಕೋಟೆ, ರಾಯಚೂರು, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನಿರಂತರವಾಗಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಧಾರವಾಡ, ಬೆಳಗಾವಿ, ಹಾವೇರಿ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.










