ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ದುರುಪಯೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳಿಂದ ಹೊಸದಾಗಿ ಅರ್ಜಿ ಆಹ್ವಾನಿಸಲಾಗುವುದು ಹಾಗೂ ಅರ್ಹರಿಗೆ ಸ್ಮಾರ್ಟ್ಕಾರ್ಡ್ ಮಾದರಿಯ ಐಡಿ ಕಾರ್ಡ್ಗಳನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸತತ 7 ಗಂಟೆಗಳ ಕಾಲ ನಡೆದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು (DC), ಜಿಲ್ಲಾ ಪಂಚಾಯತ್ ಸಿಇಒಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (SP) ಮತ್ತು ಡಿಎಫ್ಒಗಳ ಮಹತ್ವದ ಸಭೆಯ ಬಳಿಕ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಿಎಂ ಈ ಮಾಹಿತಿ ನೀಡಿದರು.
ಗ್ಯಾರಂಟಿ ಯೋಜನೆಗಳನ್ನು ಕೆಲವು ಕಡೆಗಳಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ವ್ಯವಸ್ಥೆಯನ್ನು ಪಾರದರ್ಶಕಗೊಳಿಸಲು ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳಿಗೆ ಮಾರ್ಗಸೂಚಿಗಳನ್ನು ಪರಿಷ್ಕರಿಸಲಾಗುವುದು ಎಂದು ತಿಳಿಸಿದ್ದಾರೆ.
ದುರುಪಯೋಗಕ್ಕೆ ಬ್ರೇಕ್ ಹಾಕಲು ಸ್ಮಾರ್ಟ್ಕಾರ್ಡ್ ಮಾದರಿಯ ಗುರುತಿನ ಚೀಟಿ ವಿತರಿಸಲಾಗುವುದು. ಇದಕ್ಕೆ ಸಂಬಂಧಿಸಿದ ಅಧಿಕೃತ ಮಾರ್ಗಸೂಚಿಗಳನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು.

ರಾಜ್ಯದ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ದಿನೇ ದಿನೇ ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಸರ್ಕಾರ ಮುಂದಾಗಿದೆ. ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಸರಹದ್ದಿನಲ್ಲಿ ‘ವರ್ಚುಯಲ್ ರಸ್ತೆ’ (ರಿಂಗ್ ರೋಡ್) ನಿರ್ಮಾಣ ಮಾಡಲು ಯೋಜಿಸಲಾಗಿದೆ.ಭವಿಷ್ಯದ ದಟ್ಟಣೆ ನಿಯಂತ್ರಣಕ್ಕೆ ಈ ರಸ್ತೆಗಳು ಅನಿವಾರ್ಯವಾಗಿದ್ದು, ಇದಕ್ಕಾಗಿ ತಕ್ಷಣವೇ ಜಮೀನು ಕಾಯ್ದಿರಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.














