ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 23 : ಸಂತ್ರಸ್ಥರು ಮತ್ತು ನೊಂದವರ ಪರವಾಗಿ ಪೊಲೀಸ್ ಇಲಾಖೆ ಹಾಗೂ ವಕೀಲರು ನಿಸ್ವಾರ್ಥ ಮನೋಭಾವದಿಂದ ಕೆಲಸ ಮಾಡಿದಾಗ ಮಾತ್ರ ಸಮಾಜದಲ್ಲಿ ನೈಜ ನ್ಯಾಯ ಸಿಗಲು ಸಾಧ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕುಶಾಲ್ ಚೌಕ್ಸೆ ತಿಳಿಸಿದರು.
ಸರಸ್ವತಿ ಕಾನೂನು ಕಾಲೇಜಿನ ರಜತ ಮಹೋತ್ಸವ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ 2026-27 ನೇ ಸಾಲಿನ ವಿದ್ಯಾರ್ಥಿ ಕಾನೂನು ವೇದಿಕೆ, ಎನ್.ಎಸ್.ಎಸ್.
ಮಾನವ ಹಕ್ಕುಗಳ ವೇದಿಕೆ, ರೆಡ್ಕ್ರಾಸ್ ಘಟಕ, ಇಕೊ ಕ್ಲಬ್ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ದಿನಮಾನಗಳಲ್ಲಿ ದೇಶದಲ್ಲಿ ಜಾರಿಗೆ ತರಲಾಗಿರುವ ಹೊಸ ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಕಾನೂನು ವಿದ್ಯಾರ್ಥಿಗಳು ಆಳವಾಗಿ ಅಧ್ಯಯನ ಮಾಡಿದಾಗ ಸ್ಪಷ್ಟವಾದ ಅರಿವು ಮೂಡುತ್ತದೆ. ಸದಾ ಕಾನೂನು ಚೌಕಟ್ಟಿನಲ್ಲಿ ನಿಂತು ನೊಂದವರು, ಸಂತ್ರಸ್ಥರ ಪರವಾಗಿ ನ್ಯಾಯವನ್ನು ಎತ್ತಿಹಿಡಿಯುವುದು ನಮ್ಮೆಲ್ಲರ ಪ್ರಮುಖ ಕರ್ತವ್ಯವಾಗಿದೆ. ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ ದ್ವಿಚಕ್ರ ವಾಹನ ಚಲಾಯಿಸುವಾಗಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂದು ಹೇಳಿದರು.
ಸರಸ್ವತಿ ಕಾನೂನು ಕಾಲೇಜು ಕಾರ್ಯದರ್ಶಿ ಡಿ.ಕೆ.ಶೀಲಾ, ಸದಸ್ಯ ರಾಮು, ಕಾಲೇಜಿನ ಪ್ರಾಚಾರ್ಯರಾದ ಡಾ.ಎಂ.ಎಸ್.ಸುಧಾದೇವಿ ಸಹಾಯಕ ಪ್ರಾಧ್ಯಾಪಕರು, ವಿದ್ಯಾರ್ಥಿ ಕಾನೂನು ವೇದಿಕೆಯ ಗೌರವಾಧ್ಯಕ್ಷ ಡಾ.ಕರಿಯಣ್ಣ ಕೆ.ಎಸ್. ಅಧ್ಯಕ್ಷ ವಿಶ್ವಸಾಗರ್ ಜಿ.ಪಿ. ಪ್ರಧಾನ ಕಾರ್ಯದರ್ಶಿ ವಿನುತ ಹೆಚ್.ಜಿ. ಪದಾಧಿಕಾರಿಗಳು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಗಳು, ಕಾನೂನು ವಿದ್ಯಾರ್ಥಿಗಳು ಸಮಾರಂಭದಲ್ಲಿ ಹಾಜರಿದ್ದರು.











