ಸುದ್ದಿಒನ್, ಚಿತ್ರದುರ್ಗ, ಜೂನ್.26 : ಚಿತ್ರದುರ್ಗ ನಿರ್ಮಿತಿ ಕೇಂದ್ರದಲ್ಲಿ ಈ ಹಿಂದಿನ ಯೋಜನಾ ನಿರ್ದೇಶಕರ ಅವಧಿಯಲ್ಲಿ ಆಗಿರುವ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಸಿಒಡಿ ಗೆ ವಹಿಸಲು ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾದ 2023-24ನೇ ಸಾಲಿನ ಮಾರ್ಚ್ ಅಂತ್ಯದವರೆಗಿನ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿರ್ಮಿತಿ ಕೇಂದ್ರದ ಈಗಿನ ಯೋಜನಾ ನಿರ್ದೇಶಕ ಹರೀಶ್ ಮಾತನಾಡಿ, ನಿರ್ಮಿತಿ ಕೇಂದ್ರದ ಮೂಲಕ ಒಂದು ಸಾವಿರಕ್ಕೂ ಹೆಚ್ಚು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಹಿಂದಿನ ಅಧಿಕಾರಿಗಳ ಅವಧಿಯಲ್ಲಿ ಭೌತಿಕವಾಗಿ ನಡೆದಿರುವ ಕಾಮಗಾರಿ ಗಿಂತಲೂ ಹೆಚ್ಚಿನ ಹಣವನ್ನು ಪಾವತಿಸಿರುವುದು ಹಾಗೂ ಖರ್ಚು ಮಾಡಿರುವುದು ಕಂಡುಬಂದಿದೆ.
ಈಗಾಗಲೇ ಈ ಕುರಿತ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಮೊಕದ್ದಮೆ ದಾಖಲಿಸಲಾಗಿದೆ ಎಂದರು. ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ ಪಪ್ಪಿ, ಎಂ.ಚಂದ್ರಪ್ಪ, ಎನ್.ವೈ.ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇರ್ಂದರ್ ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ಖಲಿಂ ಉಲ್ಲಾ, ರಂಗಸ್ವಾಮಿ, ದೀಪಿಕಾ, ಸತೀಶ್, ತಿಮ್ಮಯ್ಯ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.