ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಗಾಗಿ ನವೆಂಬರ್ 20ರಿಂದ 22ರವರೆಗೆ ಲಿಖಿತ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದ್ದು, ವೆಬ್ಕಾಸ್ಟಿಂಗ್ ಮೂಲಕ ಪರೀಕ್ಷೆಗಳ ಮೇಲೆ ನಿಗಾ ಇರಿಸಲಾಗುತ್ತದೆ ಎಂದು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.
ನವೆಂಬರ್ 20ರಂದು ಕನ್ನಡ ಪರೀಕ್ಷೆ
ಪ್ರಾಂಶುಪಾಲರು, ಕಾರಾಗೃಹ ಇಲಾಖೆ ಹಾಗೂ ಕೆಇಎ ದ್ವಿತೀಯ ದರ್ಜೆ ಸಹಾಯಕರ (ಎಸ್ಡಿಎ) ಹುದ್ದೆಗಳಿಗೆ ನವೆಂಬರ್ 20ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆಯಲಿದೆ. ಪ್ರಾಂಶುಪಾಲರ ಹುದ್ದೆಗೆ ಬೆಳಗಿನ ಅವಧಿಯಲ್ಲಿ ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಮಧ್ಯಾಹ್ನದ ನಂತರ ಪರೀಕ್ಷೆ ಆಯೋಜಿಸಲಾಗಿದೆ. ಈ ಪರೀಕ್ಷೆಗಳು ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ನಡೆಯಲಿವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಪ್ರಾಂಶುಪಾಲರ ಹುದ್ದೆಯ ಪರೀಕ್ಷೆಗೆ 2,850 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಕಾರಾಗೃಹ ಇಲಾಖೆ ಮತ್ತು ಕೆಇಎ ಎಸ್ಡಿಎ ಹುದ್ದೆಗಳ ಪರೀಕ್ಷೆಗೆ ಒಟ್ಟು 246 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರು ಮತ್ತು ಕಲಬುರಗಿಯಲ್ಲಿ ಪರೀಕ್ಷೆಗಳು ನಡೆಯಲಿವೆ.
ಕಾರಾಗೃಹ ಇಲಾಖೆಯ ವಿವಿಧ ಹುದ್ದೆಗಳ ಉಳಿಕೆ ಮೂಲ ವೃಂದದ ನೇಮಕಾತಿಗಾಗಿ ನವೆಂಬರ್ 21ರಂದು ಸಾಮಾನ್ಯ ಜ್ಞಾನ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ಒಟ್ಟು 60,481 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಏಳು ಜಿಲ್ಲೆಗಳ 148 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಲಾಗಿದೆ.
ನವೆಂಬರ್ 22ರಂದು ಶಿಕ್ಷಕರ ನೇಮಕಾತಿ ಪರೀಕ್ಷೆ
ವಸತಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಹುದ್ದೆಗಳ ಉಳಿಕೆ ಮೂಲ ವೃಂದದ ನೇಮಕಾತಿಗಾಗಿ ನವೆಂಬರ್ 22ರಂದು ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ 84,581 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಇದೇ ದಿನ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಹುದ್ದೆಯ ಪತ್ರಿಕೆ-2ರ ಪರೀಕ್ಷೆಯೂ ನಡೆಯಲಿದೆ. ಈ ಹುದ್ದೆಯ ಪತ್ರಿಕೆ-3ರ ಪರೀಕ್ಷೆಯನ್ನು ಡಿಸೆಂಬರ್ 5ರಂದು ನಡೆಸಲು ನಿರ್ಧರಿಸಲಾಗಿದೆ.
ಪರೀಕ್ಷೆಗಳಲ್ಲಿ ಪಾರದರ್ಶಕತೆ ಕಾಪಾಡುವ ಉದ್ದೇಶದಿಂದ ವೆಬ್ಕಾಸ್ಟಿಂಗ್ ವ್ಯವಸ್ಥೆ ಮೂಲಕ ಎಲ್ಲ ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ ಇರಿಸಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪರೀಕ್ಷಾ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಮಾಹಿತಿ ನೀಡಿದ್ದಾರೆ.












