ಬೆಂಗಳೂರು.ಸೆಪ್ಟೆಂಬರ್.25: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದು, ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸುವುದರ ಜೊತೆಗೆ ಪರೀಕ್ಷೆಯನ್ನೂ ಮುಂದೂಡಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ವಿವರಣೆ ನೀಡಿರುವ ಸಚಿವರು, ಅರ್ಜಿ ಸಲ್ಲಿಸಲು ಈ ಹಿಂದೆ ನಿಗದಿಯಾಗಿದ್ದ ಅಂತಿಮ ದಿನಾಂಕದಂದು ಎದುರಾದ ತಾಂತ್ರಿಕ ತೊಂದರೆಗಳು ಹಾಗೂ ಜಾತಿ ಮತ್ತು ಆದಾಯ ಪ್ರಮಾಣಪತ್ರಕ್ಕೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲು ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗಿದೆ. ಈಗ ಅಭ್ಯರ್ಥಿಗಳು ದಿನಾಂಕ 26-10-2026ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಶುಲ್ಕ ಪಾವತಿಯನ್ನು ಖಚಿತಪಡಿಸಿಕೊಳ್ಳಲು 28-10-2026 ಕೊನೆಯ ದಿನವಾಗಿದೆ,” ಎಂದು ಸ್ಪಷ್ಟಪಡಿಸಿದ್ದಾರೆ.
ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆಯಾಗಿರುವುದರಿಂದ ಮತ್ತು ಅಭ್ಯರ್ಥಿಗಳಿಂದ ಅಧ್ಯಯನಕ್ಕೆ ಹೆಚ್ಚಿನ ಸಮಯಾವಕಾಶ ಬೇಕೆಂಬ ಬೇಡಿಕೆ ಬಂದ ಹಿನ್ನೆಲೆಯಲ್ಲಿ, ಅಕ್ಟೋಬರ್ನಲ್ಲಿ ನಡೆಸಲು ಉದ್ದೇಶಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮುಂದೂಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯಂತೆ ಪರೀಕ್ಷೆಯನ್ನು ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಅಧಿಕೃತ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ಯಾವುದೇ ಲೋಪವಿಲ್ಲದೆ ಪೂರ್ಣಗೊಳಿಸುವುದೇ ಸರ್ಕಾರದ ಮುಖ್ಯ ಉದ್ದೇಶವಾಗಿದ್ದು, ಅಭ್ಯರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೆ ಅಧಿಕೃತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಪರೀಕ್ಷೆಗೆ ಸಿದ್ಧತೆ ನಡೆಸುವಂತೆ ಅವರು ಕರೆ ನೀಡಿದ್ದಾರೆ. ಅರ್ಜಿ ಸಲ್ಲಿಕೆಯಲ್ಲಿ ಯಾವುದೇ ಸಮಸ್ಯೆಗಳಿದ್ದರೆ ಇಲಾಖೆಯ ಸಹಾಯವಾಣಿಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.











