ಸುದ್ದಿಒನ್, ಚಿತ್ರದುರ್ಗ, ನವೆಂಬರ್.17 : ಸ್ಥಗಿತಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಸಿದರು.
ಬಸವೇಶ್ವರ ನಗರದ ಪೊಲೀಸ್ ವಸತಿ ಗೃಹದಲ್ಲಿ ರಾಜ್ಯ ಪೊಲೀಸ್, ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಪೊಲೀಸ್ ಸಮುಚ್ಚಯ ಮತ್ತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ, ತಳಕು ಪೊಲೀಸ್ ಠಾಣೆಗಳ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಪ್ರಸ್ತುತ 15 ಸಾವಿರ ಕಾನ್ಸ್‍ಟೇಬಲ್ ಹುದ್ದೆಗಳು ಖಾಲಿ ಇವೆ. ಕಳೆದ ನಾಲ್ಕು ವರ್ಷದಿಂದ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಪ್ರಸ್ತುತ ದಿನಗಳಲ್ಲಿ ಪೊಲೀಸ್ ಕಾನ್ಸ್‍ಟೇಬಲ್‍ಗಳ ಅಗತ್ಯತೆ ಇದೆ. ಪ್ರತಿ ವರ್ಷವೂ 3 ಸಾವಿರ ಪೊಲೀಸ್ ಸಿಬ್ಬಂದಿ ನಿವೃತ್ತಿ ಹೊಂದುತ್ತಿದ್ದಾರೆ. ಹಾಗಾಗಿ ಸ್ಥಗಿತಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಪೊಲೀಸ್ ಕಾನ್ಸ್‍ಟೇಬಲ್‍ಗೆ ಕನಿಷ್ಟ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಹತೆಯಾಗಿದೆ. ಆದರೆ ಈ ಹುದ್ದೆಗೆ ಬಿಇ, ಎಂಬಿಎ, ಎಂಎ ಎಂಇಡಿ ಸೇರಿದಂತೆ ಶೇ.60ರಷ್ಟು ಅರ್ಜಿಗಳು ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳೇ ಹೆಚ್ಚಾಗಿ ಅರ್ಜಿ ಸಲ್ಲಿಸುತ್ತಾರೆ. ಇದರ ಅರ್ಥ ಪೊಲೀಸ್ ಹುದ್ದೆ ಕೂಡ ಗೌರವಯುತವಾಗಿದೆ ಎಂಬುದಕ್ಕೆ ಇದು ಸಾಕ್ಷಿ ಎಂದು ಅಭಿಪ್ರಾಯಪಟ್ಟರು.