ಬೆಳಗಾವಿ: ಒಕ್ಕಲಿಗ ಸಮುದಾಯದ ಒಟ್ಟು ಜನಸಂಖ್ಯೆಗೆ ಹೋಲಿಸಿದರೆ ಶಿಕ್ಷಣ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ನೀಡಿರುವ ಮೀಸಲಾತಿ ಕಡಿಮೆ ಇದೆ. ಇದಕ್ಕಾಗಿ ಮೀಸಲಾತಿ ಹೆಚ್ಚಳಕ್ಕೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಒಕ್ಕಲಿಗ ಸಮುದಾಯದ ಜನಸಂಖ್ಯೆಗೆ ಹೋಲಿಸಿದರೆ ಶಿಕ್ಷಣ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ನೀಡಿರುವ ಮೀಸಲಾತಿ ಸಾಲುವುದಿಲ್ಲ. ಒಕ್ಕಲಿಗರಲ್ಲಿ ಬಹುತೇಕರು ರೈತರಾಗಿದ್ದು, ದೇಶಕ್ಕೆ ಅಪಾರ ಕೊಡುಗೆ ನೀಡುತ್ತಿದ್ದಾರೆ. ಇದಕ್ಕಾಗಿ ಮೀಸಲಾತಿ ಹೆಚ್ಚಳಕ್ಕೆ ಕ್ರಮ ವಹಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ನಾವು ಹೆಚ್ಚು ಮೀಸಲಾತಿ ಕೇಳಿಲ್ಲ, ಜನಸಂಖ್ಯೆಗೆ ತಕ್ಕಂತೆ ಮಾತ್ರ ನೀಡಲು ಕೋರಲಾಗಿದೆ. ಇಲ್ಲಿ ಯಾವುದೇ ಒತ್ತಡ ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಎಲ್ಲಾ ಸಮುದಾಯಗಳ ಅಗತ್ಯವೇನು ಎಂಬುದನ್ನು ಅರಿತಿದ್ದಾರೆ. ಅವರು ಎಲ್ಲರಿಗೂ ಸಾಮಾಜಿಕ ನ್ಯಾಯ ನೀಡಲಿದ್ದಾರೆ ಎಂದರು.
ಎಸ್‌ಸಿ, ಎಸ್‌ಟಿ ಸಮುದಾಯ ಮೀಸಲಾತಿ ಹೆಚ್ಚಳ ಬಹಳ ವರ್ಷಗಳಿಂದ ಚರ್ಚೆಯಲ್ಲಿತ್ತು. ಆದರೆ ಮುಖ್ಯಮಂತ್ರಿಗಳು ಮಾತ್ರ ಅದನ್ನು ಸಾಕಾರಗೊಳಿಸಲು ಕ್ರಮ ವಹಿಸಿದ್ದಾರೆ ಎಂದರು. ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಇನ್ನೂ ನಡೆಯುತ್ತಿದೆ. ನ್ಯಾಯಾಲಯವು ಸಕಾರಾತ್ಮಕ ತೀರ್ಪು ನೀಡಲಿದೆ ಎಂಬ ವಿಶ್ವಾಸವಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ಹಾದಿಯಲ್ಲಿ ಸರ್ಕಾರ ನಡೆಯುತ್ತಿದೆ. ಎಲ್ಲಾ ಸಮುದಾಯಗಳ ನ್ಯಾಯ ಸಮ್ಮತ ಬೇಡಿಕೆಗೆ ಸರ್ಕಾರ ಮನ್ನಣೆ ನೀಡಲಿದೆ ಎಂದರು.