ಚಿತ್ರದುರ್ಗ .ಜ.06: ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸಮರೋಪಾದಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದರು.
ಚಳ್ಳಕೆರೆ ನಗರದ ಶ್ರೀ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಜನತಾದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬರ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಸಮಸ್ಯೆ ಉದ್ಭವವಾಗದಂತೆ ನೋಡಿಕೊಳ್ಳಬೇಕು. ಎಲ್ಲಿಯಾದರೂ ಕುಡಿಯುವ ನೀರಿನ ಸಮಸ್ಯೆ ತಲೆ ತೋರಿದರೆ ತಕ್ಷಣವೇ ಬೋರ್‍ವೆಲ್ ಕೊರೆಸುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಏಳು ತಿಂಗಳ ಒಳಗಾಗಿ ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನ ಭಾಗ್ಯ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಇದೇ ಜನವರಿ 12ರಂದು ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಚಾಲನೆ ದೊರಕಲಿದೆ. ಈಗಾಗಲೇ ರಾಜ್ಯಾದ್ಯಂತ 43 ಸಾವಿರ ಅರ್ಜಿಗಳು ಯುವನಿಧಿ ಯೋಜನೆಗೆ ನೋಂದಣಿಯಾಗಿವೆ. ಒಟ್ಟು 4 ಲಕ್ಷ ಯುವಕ ಯುವತಿಯರು ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂಬ ಅಂದಾಜಿದೆ. ಜಿಲ್ಲೆಯ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವ ಡಿ.ಸುಧಾಕರ್ ಕರೆ ನೀಡಿದರು.
ರಾಜ್ಯದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿದ್ದು, ಶಕ್ತಿ ಯೋಜನೆ ಅಡಿ ಸುಮಾರು 100 ಕೋಟಿ ಅಧಿಕ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಶೇಕಡ 97 ರಷ್ಟು ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ಜಾರಿ ಮಾಡಲಾಗಿದೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪರಿಶೀಲಿನಾ ಸಭೆ ಜರುಗಲಿದೆ. ಬಳಿಕ ಕಾಮಗಾರಿಯನ್ನು ಅದಷ್ಟು ಶೀಘ್ರವಾಗಿ ಪೂರ್ಣಗೊಳಿಸಿ ಈ ಭಾಗಕ್ಕೆ ಭದ್ರೆಯ ನೀರು ಹರಿಸಲಾಗುವುದು ಎಂದು ತಿಳಿಸಿದರು.
ಜನರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡುವ ಸಲುವಾಗಿ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ. ಸ್ಥಳದಲ್ಲಿ ಪರಿಹಾರ ದೊರಕದ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತಾಕೀತು ಮಾಡಿದರು.