ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ: ಗುಜರಾತ್ ಮೂಲದ ಅಮೂಲ್ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ರಾಜ್ಯದಲ್ಲಿ ಮಾರಾಟ ಮಾಡಲು ಹೊರಟಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಜಿ.ಸುರೇಶ್‍ಬಾಬು ಮಾತನಾಡಿ ಗುಜರಾತ್ ಸರ್ಕಾರದ ಅಮೂಲ್ ಹಾಲು ಮತ್ತು ಉತ್ಪನ್ನಗಳನ್ನು ರಾಜ್ಯಕ್ಕೆ ತಂದು ಮಾರುಕಟ್ಟೆ ಮಾಡಲು ಹೊರಟಿರುವ ಕೇಂದ್ರ ಸರ್ಕಾರ ನಮ್ಮ ರಾಜ್ಯದ ರೈತರ ಬದುಕನ್ನು ಸರ್ವನಾಶ ಮಾಡಲು ಹೊರಟಿದೆ.
ಕೃಷಿ ಜೊತೆ ಹೈನುಗಾರಿಕೆಯನ್ನು ನಂಬಿಕೊಂಡಿರುವ ರೈತರ ಬದುಕು ದಿವಾಳಿಯಾಗುವುದಲ್ಲದೆ ನಂದಿನಿ ಹಾಲನ್ನು ಸಂಪೂರ್ಣವಾಗಿ ಅಮೂಲ್ ಹಾಲನ್ನಾಗಿ ಮಾರ್ಪಡಿಸುವ ಕುತಂತ್ರ ಇದಾಗಿದೆ. ಹಾಗಾಗಿ ಕೇಂದ್ರ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.
ಸರ್ವೋದಯ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ಮಾತನಾಡಿ ಗುಜರಾತ್ ಮಾದರಿ ಸಹಕಾರ ಸಂಘವನ್ನು ರಾಜ್ಯದಲ್ಲಿ ಅಸ್ತಿತ್ವಕ್ಕೆ ತಂದು ನಂದಿನ ಹಾಲಿನ ಮಾರುಕಟ್ಟೆಯನ್ನು ಬಂದ್ ಮಾಡಿ ಅಮೂಲ್ ಹಾಲು ಮತ್ತು ಉತ್ಪನ್ನಗಳನ್ನು ಮಾರಾಟ ಮಾಡುವ ಸಿದ್ದತೆ ನಡೆಯುತ್ತಿದ್ದು, ಹೈನುಗಾರಿಕೆಯನ್ನು ನೆಚ್ಚಿಕೊಂಡಿರುವ 25 ಲಕ್ಷ ಕುಟುಂಬಗಳು ಹಾಗೂ ಅವರ ಅಲವಂಭಿತರು ಒಟ್ಟು 75 ಲಕ್ಷ ಮಂದಿ ರಾಜ್ಯದಲ್ಲಿ ಬೀದಿಗೆ ಬೀಳುವ ಅಪಾಯಕಾರಿ ಪರಿಸ್ಥಿತಿ ಎದುರಾಗಿದೆ. ಕೇಂದ್ರ ಸರ್ಕಾರ ರಾಜ್ಯದಲ್ಲಿ ಅಮೂಲ್ ಹಾಲು ತಂದು ಮಾರಾಟ ಮಾಡಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಅದಕ್ಕಾಗಿ ರಾಜ್ಯದಲ್ಲಿರುವ ರೈತರನ್ನು ಎಚ್ಚರಿಸುವ ಕೆಲಸವಾಗಬೇಕಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ, ಉಪಾಧ್ಯಕ್ಷ ರುದ್ರಸ್ವಾಮಿ, ತಾಲ್ಲೂಕು ಅಧ್ಯಕ್ಷ ಧನಂಜಯ, ಬಿ.ಓ.ಶಿವಕುಮಾರ್, ಮೇಟಿಕುರ್ಕೆ ತಿಪ್ಪೇಸ್ವಾಮಿ, ಚೇತನ್‍ಕುಮಾರ್, ಎಂ.ಎಸ್.ಪ್ರಭು, ಎ.ತಿಪ್ಪೇಸ್ವಾಮಿ, ಓಂಕಾರಪ್ಪ, ಕೆ.ಎಂ.ಕಾಂತರಾಜು, ಎಸ್.ತಿಪ್ಪೇಸ್ವಾಮಿ, ಎಸ್.ರೇವಣ್ಣ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.