ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಏಪ್ರಿಲ್ 9ರಂದು ನಡೆಯಲಿರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ ಶಾಮನೂರು ಇಂದು ನಾಮಪತ್ರ ಸಲ್ಲಿಸಿದರು. ದಾವಣಗೆರೆ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಡೆದ ಈ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಜರಾಗಿ ಬೆಂಬಲ ಸೂಚಿಸಿದರು.
ನಾಮಪತ್ರ ಸಲ್ಲಿಕೆ ವೇಳೆ ಸಮರ್ಥ ಅವರ ತಂದೆ ಮಲ್ಲಿಕಾರ್ಜುನ ಹಾಗೂ ತಾಯಿ ಪ್ರಭಾ ಮಲ್ಲಿಕಾರ್ಜುನ ಸೇರಿದಂತೆ ಹಲವು ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಈ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್ ಹೈಕಮಾಂಡ್‌ಗೆ ಆರಂಭದಲ್ಲಿ ತಲೆನೋವಾಗಿದ್ದರೂ, ಅಂತಿಮವಾಗಿ ಸಮರ್ಥ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.

ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, “ನಾವು ಸಮರ್ಥ್ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದೇವೆ. ನಾನು ಸ್ವತಃ ನಾಮಪತ್ರ ಸಲ್ಲಿಕೆ ವೇಳೆ ಭಾಗಿಯಾಗಿದ್ದೆ. ನಮ್ಮ ಪಕ್ಷವು ಎಲ್ಲರನ್ನು ಒಳಗೊಂಡಿರುವ ಪಕ್ಷ. ಯಾವುದೇ ಶಾಸಕರು ನಿಧನರಾದಲ್ಲಿ ಅವರ ಕುಟುಂಬಕ್ಕೆ ಟಿಕೆಟ್ ನೀಡುವುದು ನಮ್ಮ ನೀತಿ. ಅದೇ ರೀತಿಯಲ್ಲಿ ಬಾಗಲಕೋಟೆಯಲ್ಲಿ ಮೇಟಿ ಅವರ ಕುಟುಂಬದ ಸದಸ್ಯರಿಗೆ ಹಾಗೂ ದಾವಣಗೆರೆಯಲ್ಲಿ ಸಮರ್ಥ ಅವರಿಗೆ ಅವಕಾಶ ನೀಡಿದ್ದೇವೆ” ಎಂದು ಹೇಳಿದರು.
ಇನ್ನೂ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಯುಬ್ ಸೇರಿದಂತೆ ಸ್ಥಳೀಯ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಉಪಚುನಾವಣೆಯ ಹಿನ್ನೆಲೆ, ಎರಡೂ ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಪ್ರಮುಖ ಪಕ್ಷಗಳು ಗೆಲುವಿಗಾಗಿ ತಂತ್ರ ರೂಪಿಸುತ್ತಿವೆ.ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸಮರ್ಥ ಶಾಮನೂರು ಅಭ್ಯರ್ಥಿತ್ವ ಘೋಷಣೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಮತದಾರರ ತೀರ್ಮಾನ ಯಾವ ದಿಕ್ಕಿನಲ್ಲಿ ಸಾಗುತ್ತದೆ ಎಂಬುದರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
















