ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ, ಆ.17: ಇದೇ ಆಗಸ್ಟ್ 21 ರಿಂದ ಸೆಪ್ಟೆಂಬರ್ 2 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ನಡೆಯಲಿದೆ. ಜಿಲ್ಲೆಯಲ್ಲಿ 3188 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 7 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದೆ. ಪರೀಕ್ಷಾ ಕಾರ್ಯವನ್ನು ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರವಾರ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2ರ ಪರೀಕ್ಷಾ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ ಮೊದಲನೇ ಪೂರಕ ಪರೀಕ್ಷೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಅದೇ ರೀತಿಯಾಗಿ ಎರಡನೇ ಪೂರಕ ಪರೀಕ್ಷೆಯನ್ನೂ ಗಂಭೀರವಾಗಿ ಪರಿಗಣಿಸಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನೀಡಿರುವ ಮಾರ್ಗಸೂಚಿಗಳನ್ನು ಎಲ್ಲ ಹಂತದ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದ ಅವರು, ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಪರೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದರು.
ಪರೀಕ್ಷಾ ಕೇಂದ್ರಗಳ ಸುತ್ತ ಅಗತ್ಯ ಬಂದೋಬಸ್ತ್ ಕಲ್ಪಿಸಬೇಕು. ಸೂಕ್ತ ಪೊಲೀಸ್ ರಕ್ಷಣೆಯಲ್ಲಿಯೇ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಬೇಕು. ಪ್ರಶ್ನೆಪತ್ರಿಕೆಗಳ ರಕ್ಷಣೆಗಾಗಿ ನೇಮಿಸಿರುವ ವಿಶೇಷ ಪ್ರಶ್ನೆ ಪತ್ರಿಕಾ ಪಾಲಕರ ತ್ರಿಸದಸ್ಯ ಸಮಿತಿ ನಿಯಮಾನುಸಾರ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ಪರೀಕ್ಷಾ ಕಾರ್ಯ ಕೇವಲ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಮಾತ್ರ ಸಂಬಂಧಿಸಿಲ್ಲ. ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿ ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು ಎಂದು ತಾಕೀತು ಮಾಡಿದರು.
ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ ಮಾತನಾಡಿ, ಚಿತ್ರದುರ್ಗ ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಚಳ್ಳಕೆರೆಯ ಸರ್ಕಾರಿ ಪದವಿಪೂರ್ವ ಕಾಲೇಜು, ಹಿರಿಯೂರು ಸರ್ಕಾರಿ ಪದವಿಪೂರ್ವ ಕಾಲೇಜು, ಹೊಸದುರ್ಗದ ಸರ್ಕಾರಿ ಪದವಿಪೂರ್ವ ಕಾಲೇಜು, ಮೊಳಕಾಲ್ಮುರು ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಹೊಳಲ್ಕೆರೆಯ ಕೊಟ್ರ ನಂಜಪ್ಪ ಪದವಿಪೂರ್ವ ಕಾಲೇಜು ಸೇರಿದಂತೆ ಜಿಲ್ಲೆಯಲ್ಲಿ 7 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 3188 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
ಜಿಲ್ಲೆಯಲ್ಲಿ ಸೂಕ್ಷ ಹಾಗೂ ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಇಲ್ಲ. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಅವಶ್ಯಕತೆ ಇದೆ. ಪರೀಕ್ಷೆ ಪ್ರಾರಂಭವಾಗುವುದಕ್ಕಿಂತ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ನಂತರ 30 ನಿಮಿಷಗಳು ಪೊಲೀಸ್ ಬಂದೋಬಸ್ತಿನ ಅವಶ್ಯಕತೆ ಇದೆ. ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಬೇಕು. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿರುವ ಜೆರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚಿಸುವುದು. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ 144 ಸೆಕ್ಷನ್ ಜಾರಿ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್‍ಲೈನ್ ಮೂಲಕ ದಾಖಲಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಪೋನುಗಳನ್ನು ತರುವುದು ಕಡ್ಡಾಯವಾಗಿ ನಿಷೇಧಿಸುವುದು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತೀಕ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ ಸೇರಿದಂತೆ ಆಯಾ ತಾಲ್ಲೂಕಿನ ತಹಶೀಲ್ದಾರ್‍ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.