ಬೆಂಗಳೂರು, (ಫೆ.19) : ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ‘ಕಲಾ ತಪಸ್ವಿ’ ರಾಜೇಶ್(82) ಇಂದು ಮುಂಜಾನೆ (ಫೆ.19) ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಫೆಬ್ರವರಿ 9 ರಂದು ಆಸ್ಪತ್ರೆಗೆ ದಾಖಲಾಗಿದ್ದರು.
ರವೀಂದ್ರ ಕಲಾಕ್ಷೇತ್ರದಲ್ಲಿ ರಾಜೇಶ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜಕರಿಗೆ ಮೂರು ಗಂಟೆಗಳ ಕಾಲ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಟ್ಟು, ನಂತರ ಮೇಡಿ ಅಗ್ರಹಾರದ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು.
150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಾಯಕ ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದರು. ‘ವೀರ ಸಂಕಲ್ಪ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. 1968 ರಲ್ಲಿ ತೆರೆಕಂಡ ‘ನಮ್ಮ ಊರು’ ಚಿತ್ರ ರಾಜೇಶ್ ಅವರಿಗೆ ಅಪಾರ ಜನಪ್ರಿಯತೆ ತಂದುಕೊಟ್ಟಿತ್ತು. ‘ಸೊಸೆ ತಂದ ಸೌಭಾಗ್ಯ’, ‘ದೇವರ ದುಡ್ಡ’, ‘ಕಲಿಯುಗ’, ‘ದೇವರ ಗುಡಿ’, ‘ವೀರ ಸಂಕಲ್ಪ’, ‘ಗಂಗೆ ಗೌರಿ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ರಾಜೇಶ್ ಮನೋಜ್ಞ ಅಭಿನಯದ ಮೂಲಕ ಕನ್ನಡ ಚಿತ್ರರಸಿಕರ ಮನದಲ್ಲಿ ಕಲಾತಪಸ್ವಿಯಾಗಿ ನೆಲೆ ನಿಂತರು.
ಅವರ ಅಭಿನಯದ ಕೊನೆಯ ಚಿತ್ರ ‘ಓಲ್ಡ್ಮಾಂಕ್’ ನಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ಫೆ.25ರಂದು ಸಿನಿಮಾ ಬಿಡುಗಡೆ ಆಗಲಿದೆ.