ಸುದ್ದಿಒನ್, ಚಿತ್ರದುರ್ಗ ಫೆ. 08 : ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಗುರುವಾರದಂದು ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಿದ್ದು, ಸ್ಥಳೀಯವಾಗಿ ಪರಿಹರಿಸಬಹುದಾದಂತಹ ಅರ್ಜಿಗಳನ್ನು ಜಿಲ್ಲಾ ಮಟ್ಟದಲ್ಲಿಯೇ ನಿಗದಿತ ಕಾಲಮಿತಿಯೊಳಗೆ ಇತ್ಯರ್ಥಪಡಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಸೂಚನೆ ನೀಡಿದರು.
ಮುಖ್ಯಮಂತ್ರಿಗಳು ಗುರುವಾರದಂದು ಬೆಂಗಳೂರಿನಲ್ಲಿ ನಡೆಸಿದ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ಭಾಗವಹಿಸಿ ಮಾತನಾಡಿದ ಅವರು, ಸ್ಥಳೀಯವಾಗಿರುವ ಜನರ ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಇತ್ಯರ್ಥಪಡಿಸಬೇಕು.
ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಜನತಾದರ್ಶನದಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಕೂಡ ನಿಗದಿತ ಅವಧಿಯೊಳಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿ, ಇತ್ಯರ್ಥಪಡಿಸಬೇಕು. ಅಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಕಾನೂನಿಗೆ ಅಥವಾ ನಿಯಮಗಳಿಗೆ ವಿರುದ್ಧವಾಗಿರುವಂತಹ ಅರ್ಜಿಗಳಿಗೆ ನಿಗದಿತ ಕಾಲಮಿತಿಯಲ್ಲಿಯೇ ಹಿಂಬರಹ ನೀಡಿ ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಕಾರ್ತಿಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕ ಬಿ. ಆನಂದ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್, ಡಿಯುಡಿಸಿ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕೆಸ್ವಾನ್‍ನ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಗಳ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.