ಬೆಂಗಳೂರು: ಕಾಂಗ್ರೆಸ್ ಸರ್ಕಾರಕ್ಕೆ ಜಾತಿಗಣತಿ ವರದಿ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಿದ್ಧಪಡಿಸಿರುವ ಕಾಂತರಾಜು ವರದಿಯನ್ನು ಸ್ವೀಕರಿಸಲು ಸರ್ಕಾರ ಸಿದ್ಧವಾಗಿದೆ. ಆದರೆ ಇದಕ್ಕೆ ಒಕ್ಕಲಿಗ ಸಮುದಾಯ ಹಾಗೂ ಲಿಂಗಾಯತ ಸಮುದಾಯ ವಿರೋಧ ವ್ಯಕ್ತಪಡಿಸಲು ಹೊರಟಿದೆ. ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಈ ವರದಿಯನ್ನು ತಿರಸ್ಕಾರ ಮಾಡಿದ್ದಾರೆ. ಇದಕ್ಕೆ ಸ್ವಾಮೀಜಿಗಳ ಬೆಂಬಲವೂ ಸಿಕ್ಕಿದೆ.
ಜಾತಿಗಣತಿ ಅಂಕಿ ಅಂಶಗಳಲ್ಲಿ ಸಾಕಷ್ಟು ಲೋಪದೋಷಗಳಿವೆ. ಈ ವರದಿಯನ್ನು ಮನೆಯಲ್ಲಿಯೇ ಕೂತು ತಯಾರು ಮಾಡಲಾಗಿದೆ ಎಂದು ಶಾಮನೂರು ಶಿವಶಂಕರಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸ್ವಾಮೀಜಿಗಳು ಬೆಂಬಲ ನೀಡಿದ್ದು, ಈ ಬಗ್ಗೆ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿದ್ದಾರೆ. ಕಾಂತರಾಜು ವರದಿಯಲ್ಲಿ ಲಿಂಗಾಯತರು ಕಡಿಮೆ ಇದ್ದಾರೆಂದು ತೋರಿಸಲಾಗಿದೆ. ಮತ್ತೊಮ್ಮೆ ವೈಜ್ಞಾನಿಕ ವರದಿ ಸಿದ್ದವಾಗಲಿ ಎಂದು ಆಗ್ರಹಿಸಿದ್ದಾರೆ.
ಜಾತಿಗಣತಿ ವರದಿಗೆ ಲಿಂಗಾಯತ ಸಮುದಾಯ ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ಸಭೆ ಕೂಡ ಕರೆಯಲಾಗಿದೆ. ಈ ಸಭೆಯಲ್ಲಿ 51ಕ್ಕೂ ಹೆಚ್ಚು ಶಾಸಕರು ಭಾಗಿಯಾಗುವ ಸಾಧ್ಯತೆ ಇದೆ. ಈ ಸಭೆಯ ಬಳಿಕ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.