ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಹಿನ್ನಡೆಯಾಗಿದೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ಸದ್ಯಕ್ಕೆ ಜಾಮೀನು ನೀಡಲು ನಿರಾಕರಿಸಿದ್ದು, ಪ್ರಕರಣದ ವಿಚಾರಣಾ ಪ್ರಕ್ರಿಯೆಯನ್ನು ವೇಗಗೊಳಿಸುವಂತೆ ಸೂಚಿಸಿದೆ.ಪ್ರಕರಣದ ಒಟ್ಟು 60 ಪ್ರಮುಖ ಸಾಕ್ಷಿಗಳ ವಿಚಾರಣೆಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಪ್ರಾಸಿಕ್ಯೂಷನ್‌ಗೆ ಗಡುವು ನೀಡಿದೆ. ಒಂದು ವೇಳೆ ನಿಗದಿತ ಅವಧಿಯೊಳಗೆ ಸಾಕ್ಷ್ಯ ವಿಚಾರಣೆಯಲ್ಲಿ ಪ್ರಗತಿ ಕಂಡುಬರದಿದ್ದರೆ, ದರ್ಶನ್ ಅವರು ಮರುಬಾರಿಯೂ ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಬಹುದಾಗಿದೆ ಎಂದು ನ್ಯಾಯಪೀಠ ತಿಳಿಸಿದೆ.
ನವೆಂಬರ್ 3ರಂದು ದೋಷಾರೋಪಣೆ ನಡೆದಿದ್ದರೂ, ಕಳೆದ ಏಳು ತಿಂಗಳಲ್ಲಿ ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿರುವುದಕ್ಕೆ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ. “ವಿಚಾರಣೆ ವಿಳಂಬವಾಗಬಾರದು. ಅನಗತ್ಯ ಕಾರಣಗಳಿಂದ ಸಾಕ್ಷ್ಯ ವಿಚಾರಣೆಯನ್ನು ಮುಂದೂಡಬಾರದು” ಎಂದು ನ್ಯಾಯಮೂರ್ತಿ ಪರ್ದಿವಾಲಾ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಪ್ರಕರಣದ ವಿಚಾರಣೆ ನಡೆಯುತ್ತಿರುವ 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ಖಾಯಂ ನ್ಯಾಯಾಧೀಶರಿಲ್ಲದಿರುವುದರಿಂದ ವಿಚಾರಣೆಗೆ ವಿಳಂಬವಾಗುತ್ತಿದೆ ಎಂದು ದರ್ಶನ್ ಪರ ವಕೀಲ ಸಿದ್ದಾರ್ಥ್ ಲೂತ್ರಾ ನ್ಯಾಯಾಲಯದ ಗಮನಕ್ಕೆ ತಂದರು.
ಈ ಹಿನ್ನೆಲೆಯಲ್ಲಿ, ಖಾಲಿ ಇರುವ ನ್ಯಾಯಾಧೀಶರ ಹುದ್ದೆಯನ್ನು ಶೀಘ್ರ ಭರ್ತಿ ಮಾಡುವಂತೆ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಜೈಲಿನಲ್ಲಿ ಮೂಲಭೂತ ಸೌಲಭ್ಯಗಳನ್ನು ನೀಡುತ್ತಿಲ್ಲ ಎಂಬ ದರ್ಶನ್ ಆರೋಪಕ್ಕೂ ನ್ಯಾಯಾಲಯ ಸ್ಪಂದಿಸಿದ್ದು, ಜೈಲು ಕೈಪಿಡಿಯಲ್ಲಿ ಉಲ್ಲೇಖಿಸಿರುವ ಎಲ್ಲಾ ಸೌಲಭ್ಯಗಳನ್ನು ಇತರ ಕೈದಿಗಳಂತೆ ದರ್ಶನ್ ಅವರಿಗೂ ಒದಗಿಸಬೇಕು ಎಂದು ಜೈಲು ಅಧೀಕ್ಷಕರಿಗೆ ಆದೇಶಿಸಿದೆ. ಆದರೆ ಕ್ವಾರಂಟೈನ್ ಸೆಲ್ ಸಂಬಂಧಿಸಿದ ಬೇಡಿಕೆಗೆ ನ್ಯಾಯಾಲಯ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ದರ್ಶನ್ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿ, “ಪ್ರಮುಖ ಸಾಕ್ಷಿಗಳ ವಿಚಾರಣೆಯೇ ಇನ್ನೂ ಪೂರ್ಣಗೊಂಡಿಲ್ಲ” ಎಂದು ನ್ಯಾಯಾಲಯದ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸಾಕ್ಷಿಗಳ ವಿಚಾರಣೆ ನಡೆಯುತ್ತಿರುವ ಹಂತದಲ್ಲಿ ಹಸ್ತಕ್ಷೇಪ ಮಾಡುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದೆ.
ಈ ಮೂಲಕ ಜಾಮೀನು ಅರ್ಜಿಯನ್ನು ಇತ್ಯರ್ಥಪಡಿಸಿರುವ ಸುಪ್ರೀಂ ಕೋರ್ಟ್, ದರ್ಶನ್ ಅವರಿಗೆ ಸದ್ಯಕ್ಕೆ ಬಿಡುಗಡೆಯ ಅವಕಾಶ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ. ಪ್ರಕರಣದ ಬೆಳವಣಿಗೆಗಳನ್ನು ಗಮನಿಸಿದರೆ, ನಟ ದರ್ಶನ್ ಇನ್ನೂ ಕನಿಷ್ಠ ಒಂದು ವರ್ಷ ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ಎದುರಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











