ಸುದ್ದಿಒನ್,ಬೆಂಗಳೂರು,ಜೂನ್.03: ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಸಂಭವಿಸಿರುವ ಸೂಚನೆಗಳು ದೊರೆತಿವೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕಾಗಿ ಪ್ರಮುಖ ಆಕಾಂಕ್ಷಿಯಾಗಿದ್ದ ಸತೀಶ್ ಜಾರಕಿಹೊಳಿ ಅವರಿಗೆ ಕೊನೆಯ ಕ್ಷಣದಲ್ಲಿ ನಿರಾಸೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅವರ ಬದಲಿಗೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ ಒಲಿಯುವ ಸಾಧ್ಯತೆ ಹೆಚ್ಚಾಗಿದೆ.
ಹಾಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಘಟಕಕ್ಕೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ವೇಗ ಪಡೆದುಕೊಂಡಿತ್ತು. ಕಳೆದ ಕೆಲವು ದಿನಗಳಿಂದ ಹಲವು ನಾಯಕರ ಹೆಸರುಗಳು ಚರ್ಚೆಯಲ್ಲಿದ್ದರೂ, ಕೊನೆಗೆ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಪರ ಒಲವು ತೋರಿದೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ಕೇಳಿಬರುತ್ತಿದೆ.
ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕುರಿತಾಗಿ ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರಕ್ಕೆ ಬಂದಿದ್ದು, ಬಿ.ಕೆ. ಹರಿಪ್ರಸಾದ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸುವ ಪ್ರಕ್ರಿಯೆ ಶೀಘ್ರದಲ್ಲೇ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಮುಂದಿನ ಕೆಲ ಗಂಟೆಗಳು ಅಥವಾ ದಿನಗಳಲ್ಲಿ ಈ ಕುರಿತು ಸ್ಪಷ್ಟ ಆದೇಶ ಹೊರಬೀಳುವ ನಿರೀಕ್ಷೆ ಇದೆ.















