ಚಿತ್ರದುರ್ಗ,(ಫೆಬ್ರವರಿ.26) : ಕೇಂದ್ರ ಸರ್ಕಾರ ವತಿಯಿಂದ ಅನುಮತಿ ದೊರೆತ ಕೂಡಲೇ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ನೋಂದಣಿಗೆ ಶೀಘ್ರ ಮರು ಚಾಲನೆ ನೀಡಲಾಗುವುದು ಎಂದು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲೆಯ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಹೆಚ್ಚುವರಿಯಾಗಿ ರಾಗಿ ಖರೀದಿ ಮಾಡಲು ಈಗಾಗಲೇ ಅನುಮತಿ ಕೇಳಲಾಗಿದ್ದು, ಕೇಂದ್ರ ಸರ್ಕಾರದಿಂದ ಅನುಮತಿ ದೊರೆತ ನಂತರ ಸ್ಥಗಿತಕೊಂಡಿರುವ ರಾಗಿ ಖರೀದಿ ನೋಂದಣಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಕಡಲೆ ಖರೀದಿ ಕೇಂದ್ರಕ್ಕೆ ಈಗಾಗಲೇ ಅನುಮತಿ ನೀಡಲಾಗಿದ್ದು, ಕನಿಷ್ಟ ಬೆಂಬಲ ಯೋಜನೆಯಡಿ ಕಡಲೆ ಖರೀದಿ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.
ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಾಸ್ ತೆಗೆದುಕೊಂಡಿದೆ ಆದರೆ ರಾಜ್ಯ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ರೈತರ ಮುಖಂಡರು ಆರೋಪ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ರೈತ ಸಂಘದ ಮುಖಂಡರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಿದ್ದು, ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಹೇಳಿದರು.
ಜಿಲ್ಲೆಯ ಎಲ್ಲಾ ಗ್ರಾಮಪಂಚಾಯಿತಿವಾರು ಗಣಕೀಕೃತ ಮಳೆ ಮಾಪನ ಕೇಂದ್ರಗಳಿದ್ದು, ಮಳೆಯ ವಿವರವನ್ನು ನಿಖರವಾಗಿ ದಾಖಲಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಆಧುನಿಕ ತಂತ್ರಜ್ಞಾನದ ಮಳೆ ಮಾಪನಗಳು ಬಂದರೆ ಅಳವಡಿಸಲು ಅಗತ್ಯ ಕ್ರಮವಹಿಸಲಾಗುವುದು ಎಂದರು.
ಯುದ್ಧಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ಜಿಲ್ಲೆಯ ಮೂವರು ವಿದ್ಯಾರ್ಥಿಗಳನ್ನು ವಾಪಾಸ್ ಕರೆಸಿಕೊಳ್ಳಲು ರಾಜ್ಯ ಸರ್ಕಾರ ಎಲ್ಲ ರೀತಿಯ ಕ್ರಮಕೈಗೊಂಡಿದೆ. ಈಗಾಗಲೇ ಸರ್ಕಾರವು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಾದ ಡಾ.ಮನೋಜ್ ರಾಜನ್ ಅವರನ್ನು ನೋಡಲ್ ಅಧಿಕಾರಿಗಳನ್ನಾಗಿ ಸರ್ಕಾರ ನೇಮಕ ಮಾಡಲಾಗಿದೆ. ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ಕರೆತರಲು ವ್ಯವಸ್ಥೆ ಮಾಡಲಾಗುತ್ತಿದೆ. ಪೋಷಕರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಸಚಿವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸತೀಶ್‍ರೆಡ್ಡಿ, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಡಾ.ಪಿ.ರಮೇಶ್‍ಕುಮಾರ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.