ನವದೆಹಲಿ, (ಮೇ.18) : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಆಯ್ಕೆ ಬಹುತೇಕ ಅಂತಿಮಗೊಂಡಿದೆ. ಶಿವಕುಮಾರ್ ಉಪಮುಖ್ಯಮಂತ್ರಿ ಹುದ್ದೆಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಚುನಾವಣೆಯಲ್ಲಿ ಸ್ಪಷ್ಟ ಬಹುಮತಸಿಕ್ಕರೂ ಮುಖ್ಯಮಂತ್ರಿ ಹುದ್ದೆಗೆ ತೀವ್ರ ಪೈಪೋಟಿಯಿತ್ತು. ಇದೀಗ ರಾಜಿ ಸಂತಾನದಿಂದ ಕಾಂಗ್ರೆಸ್ ಪಕ್ಷಕ್ಕೆ ಕೊಂಚ ರಿಲೀಫ್ ಸಿಕ್ಕಿದೆ.
ಸಿದ್ದರಾಮಯ್ಯಗೆ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿದೆ. ಸಿಎಂ ಕುರ್ಚಿಗಾಗಿ ಕೊನೆಯ ಘಳಿಗೆಯವರೆಗೂ ತೀವ್ರ ಪ್ರಯತ್ನ ನಡೆಸಿದ್ದ ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು.
ಇಂದು (ಗುರುವಾರ) ಸಂಜೆ ಕರ್ನಾಟಕ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಶಾಸಕರು ನಿರ್ಧರಿಸಲಿದ್ದಾರೆ. ನಂತರ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಈಗಾಗಲೇ ಪರಮೇಶ್ವರ್ ಅವರು ರಾಜಭವನಕ್ಕೆ ತೆರಳಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಮಯಾವಕಾಶ ಕೋರಿದ್ದಾರೆ. ಮೇ 20ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ದೆಹಲಿಯಲ್ಲಿ ಸುದೀರ್ಘ ಚರ್ಚೆಯ
ನಂತರ ಬುಧವಾರ ಮಧ್ಯರಾತ್ರಿಯ ವೇಳೆ ಸರ್ಕಾರ ರಚನೆಗೆ ಒಮ್ಮತಕ್ಕೆ ಬರಲಾಯಿತು ಎಂದು ಕಾಂಗ್ರೆಸ್ ಮೂಲಗಳು ಬಹಿರಂಗಪಡಿಸಿವೆ .
ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ.
ಸುದೀರ್ಘ ಚರ್ಚೆಯ ನಂತರ ಪಕ್ಷದ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡಲು ಒಲವು ತೋರಿತು.
ಆದರೆ ಇದಕ್ಕೆ ಒಪ್ಪದ ಡಿಕೆಶಿ ಸಿಎಂ ಸ್ಥಾನಕ್ಕಾಗಿ ಪಟ್ಟು ಸಡಿಲಿಸಿರಲಿಲ್ಲ. ಕೊನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಮಧ್ಯರಾತ್ರಿಯವರೆಗೂ ಎರಡೂ ಕಡೆಯವರೊಂದಿಗೆ ಸರಣಿ ಮಾತುಕತೆ ನಡೆಸಿ ಸಮಾಧಾನ ಪಡಿಸಿದರು. ಅಂತಿಮವಾಗಿ ಪ್ರಸ್ತಾಪಗಳನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಶನಿವಾರ ಪ್ರಮಾಣ ವಚನ ಸ್ವೀಕಾರ
ಇಂದು (ಗುರುವಾರ) ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಆಯೋಜಿಸಲಿದ್ದಾರೆ. ಸಂಜೆ 7 ಗಂಟೆಗೆ ಇಂದಿರಾಗಾಂಧಿ ಭವನದಲ್ಲಿ ನಡೆಯಲಿರುವ ಸಭೆಗೆ ಹೊಸದಾಗಿ ಆಯ್ಕೆಯಾಗಿರುವ ಶಾಸಕರು ಹಾಗೂ ಎಂಎಲ್‌ಸಿಗಳು ಮತ್ತು ಸಂಸದರು ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪತ್ರ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಈ ಬಾರಿಯ ಸಿಎಲ್‌ಪಿ ಸಭೆಯಲ್ಲಿ ಸಿಎಂ ಹೆಸರು ಅಧಿಕೃತವಾಗಿ ಘೋಷಣೆಯಾಗಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಮೇ 20 ರಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.